ಅಂತರ್‌ರಾಜ್ಯ ಚೆಕ್‌ಪೋಸ್ಟ್‌ನವರು ಒತ್ತಡಕ್ಕೆ ಮಣಿಯದೇ ಕೆಲಸ ಮಾಡಿ- ಬೊಮ್ಮಾಯಿ

ಚಿಕ್ಕೋಡಿ: ಅಂತರ್‌ರಾಜ್ಯ ಗಡಿಗಳಲ್ಲಿನ ಚೆಕ್‍ಪೋಸ್ಟ್ ಗಳಲ್ಲಿ ಕೆಲಸ ಮಾಡುವವರು ಯಾವುದೇ ಒತ್ತಡಕ್ಕೆ ಮಣಿಯದೇ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕುಗನೊಳ್ಳಿ ಬಳಿ ಇರುವ ಅಂತರ್‍ರಾಜ್ಯ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲಿಸಿ, ಬಳಿಕ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಮಹಾರಾಷ್ಟ್ರದಿಂದ ಆಗಮಿಸುತ್ತಿರುವ ಜನರಲ್ಲಿ ಅತೀ ಹೆಚ್ಚು ಸೋಂಕು ಕಂಡುಬಂದಿದೆ. ಇನ್ನೂ ಹೆಚ್ಚಳವಾಗುತ್ತಿದೆ. ಆದ್ದರಿಂದ ರಾಜ್ಯ ಪ್ರವೇಶಕ್ಕೆ ಇ-ಪಾಸ್ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇ-ಪಾಸ್ ಇಲ್ಲದೆ ಬರುತ್ತಿರುವವರನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.

ಕೋವಿಡ್-19 ನಿಯಂತ್ರಣದಲ್ಲಿ ಗಡಿ ಭಾಗದ ಚೆಕ್ ಪೋಸ್ಟ್ ಪಾತ್ರ ಪ್ರಮುಖವಾಗಿದೆ. ಸೇವಾ ಸಿಂಧು ಮೂಲಕ ಇ-ಪಾಸ್ ಪಡೆದುಕೊಂಡು ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡುವ ಮೂಲಕ ಅತ್ಯುತ್ತಮ ಕೆಲಸ ಮಾಡಲಾಗುತ್ತಿದೆ. ಕಳೆದ ವಾರದಿಂದ ಇ-ಪಾಸ್ ನೀಡುವುದನ್ನು ಸ್ಥಗಿತಗೊಳಿಸಲಾಗಿದೆ. ಮುಂದೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಕಾರ್ಯನಿರ್ವಹಿಸಲಾಗುವುದು. ಜಿಲ್ಲಾಡಳಿತ, ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಸೇರಿದಂತೆ ಎಲ್ಲರೂ ಹಗಲಿರುಳು ಉತ್ತಮ ಕೆಲಸ ಮಾಡುತ್ತಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪೊಲೀಸ್, ಆರೋಗ್ಯ ಇಲಾಖೆ ಸೇರಿದಂತೆ ಕೊರೊನಾ ವಾರಿಯರ್ಸ್ ಗಳಿಗೂ ಸೋಂಕು ಹರಡುತ್ತಿರುವುದರಿಂದ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದರು. ಇದೇ ವೇಳೆ ಮಹಾರಾಷ್ಟ್ರದಿಂದ ಪ್ರತಿದಿನ ಆಗಮಿಸುವವರ ಮಾಹಿತಿ ಪಡೆದರು. ಮಹಾರಾಷ್ಟ್ರ, ಗುಜರಾತ್ ಹಾಗೂ ಉತ್ತರದ ರಾಜ್ಯಗಳಿಂದ ಈ ವರೆಗೆ 48,442 ವಾಹನಗಳಲ್ಲಿ 1.49 ಲಕ್ಷ ಜನ ರಾಜ್ಯಕ್ಕೆ ಆಗಮಿಸಿದ್ದಾರೆ. ಜಿಲ್ಲೆಯ ಮಹಾರಾಷ್ಟ್ರದ ಗಡಿಯಲ್ಲಿ 28 ಅಂತರ್‌ರಾಜ್ಯ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಹಾಸನದ ಪೊಲೀಸರು ನಿಪ್ಪಾಣಿಯಿಂದ ವಾಪಸ್ ತೆರಳಿದ ಬಳಿಕ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ ಗಡಿಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬ ಸಿಬ್ಬಂದಿ ಕಡ್ಡಾಯವಾಗಿ ಕೊರೊನಾ ತಪಾಸಣೆ ಮಾಡಿಸಬೇಕು. ಅಲ್ಲದೆ ಫ್ರಂಟ್ ಲೈನ್‍ನಲ್ಲಿ ಕೆಲಸ ಮಾಡುವ ಸಿಬ್ಬಂದಿ ಕಡ್ಡಾಯವಾಗಿ ಪಿಪಿಇ ಬಳಸುವಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಸೂಚನೆ ಕೂಡ ನೀಡಿದರು.

Comments

Leave a Reply

Your email address will not be published. Required fields are marked *