ಇತಿಹಾಸದಲ್ಲೇ ಮೊದಲ ಬಾರಿಗೆ ವೈದ್ಯರಿಗೆ ಆಹ್ವಾನ, ಸರ್ಕಾರದ ಗೌರವಕ್ಕೆ ನಾನು ಆಭಾರಿ: ಡಾ.ಮಂಜುನಾಥ್

– ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ, ಡಿಸಿಎಂಗೆ ಆಹ್ವಾನ

ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ವೈದ್ಯರಿಗೆ ಆಹ್ವಾನ ನೀಡಿದ್ದಾರೆ. ಹೀಗಾಗಿ ಸರ್ಕಾರದ ಗೌರವಕ್ಕೆ ನಾನು ಆಭಾರಿಯಾಗಿರುತ್ತೇನೆ ಎಂದು ಡಾಕ್ಟರ್ ಮಂಜುನಾಥ್ ದಸರಾ ಉದ್ಘಾಟನೆಗೆ ತಮ್ಮನ್ನು ಆಯ್ಕೆ ಮಾಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೊರೊನಾ ವಾರಿಯರ್ಸ್‍ಗೆ ಗೌರವ- ಡಾ.ಮಂಜುನಾಥ್‍ರಿಂದ ಮೈಸೂರು ದಸರಾ ಉದ್ಘಾಟನೆ

ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ಮೈಸೂರು ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ನೇತೃತ್ವದ ತಂಡ ಇಂದು ಸಿಎಂ ಯಡಿಯೂರಪ್ಪಗೆ ಅಧಿಕೃತವಾಗಿ ಆಹ್ವಾನ ನೀಡಿದೆ. ಮುಖ್ಯ ಅತಿಥಿಯಾಗಿ ಕಾರ್ಯಕ್ರಮ ಉದ್ಘಾಟನೆಗೆ ಡಾ.ಮಂಜುನಾಥ್ ಅವರಿಗೂ ಆಹ್ವಾನ ನೀಡಿದ್ದಾರೆ. ಮೈಸೂರು ಪೇಟ ಮತ್ತು ರೇಷ್ಮೆ ಶಾಲು ಹೊದಿಸಿ ಉದ್ಘಾಟನೆಗೆ ಆಹ್ವಾನಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಡಾ.ಮಂಜುನಾಥ್, ಕೊರೊನಾ ವಾರಿಯರ್ಸ್‍ಗೆ ಗೌರವ ಸಲ್ಲಿಸುವ ಸಲುವಾಗಿ ವಿಶ್ವವಿಖ್ಯಾತ ದಸರಾ ಉದ್ಘಾಟನೆಗೆ ನನ್ನನ್ನು ಆಹ್ವಾನ ಮಾಡಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ ವೈಧ್ಯರಿಗೆ ಆಹ್ವಾನ ನೀಡಿದ್ದಾರೆ. ಸರ್ಕಾರದ ಗೌರವಕ್ಕೆ ನಾನು ಆಭಾರಿಯಾಗಿರುತ್ತೇನೆ. ಜೊತೆಗೆ ಕೊರೊನಾ ನಡುವೆ ದಸರಾ ನಡೆಯುತ್ತಿದೆ. ಹೀಗಾಗಿ ಸರ್ಕಾರದ ಜೊತೆಗೆ ಸಾರ್ವಜನಿಕರು ಎಚ್ಚರಿ ವಹಿಸಬೇಕು ಎಂದರು.

ಕೊರೊನಾಕ್ಕೆ ಇನ್ನೂ ವ್ಯಾಕ್ಸಿನ್ ಇಲ್ಲ. ವ್ಯಾಕ್ಸಿನ್ ಅಂದರೆ ಅದು ಕೇವಲ ಮಾಸ್ಕ್ ಮಾತ್ರ. ಮಾಸ್ಕ್ ಹಾಕಿಕೊಂಡು, ಸಾಮಾಜಿಕ ಅಂತರ ಕಾಪಾಡಬೇಕು. ಬಹುಮುಖ್ಯವಾಗಿ ಮಾತನಾಡುವಾಗ ಮಾಸ್ಕ್ ಹಾಕಿಕೊಂಡು ಮಾತನಾಡಿ. ರೋಗದಿಂದ ದೂರ ಇರೋದು ನಿಮ್ಮ ಎಚ್ಚರಿಕೆಯ ಕೆಲಸವಾಗಿದೆ ಎಂದು ಡಾಕ್ಟರ್ ಮಂಜುನಾಥ್ ಸಾರ್ವಜನಿಕರ ಬಳಿ ಮನವಿ ಮಾಡಿಕೊಂಡರು.

ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಡಿಸಿಎಂಗೆ ಆಹ್ವಾನ
ಇದೇ ಅಕ್ಟೋಬರ್ 17ರಂದು ಆರಂಭವಾಗಲಿರುವ ಜಗತ್ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಿದರು. ಮೈಸೂರು ನಗರದ ಮೇಯರ್ ತಸ್ನಿಂ, ಅಧಿಕಾರಿಗಳೊಂದಿಗೆ ಡಿಸಿಎಂ ನಿವಾಸಕ್ಕೆ ಭೇಟಿ ನೀಡಿದ ಸಚಿವರು, ಉಪ ಮುಖ್ಯಮಂತ್ರಿಗಳಿಗೆ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ ನಾಡಹಬ್ಬದಲ್ಲಿ ಪಾಲ್ಗೊಳ್ಳುವಂತೆ ಆತ್ಮೀಯವಾಗಿ ಸ್ವಾಗತ ಕೋರಿದರು.

ಆಹ್ವಾನ ಪತ್ರಿಕೆಯನ್ನು ಸ್ವೀಕರಿಸಿದ ಡಿಸಿಎಂ, ಕೋವಿಡ್ ಸಂಕಷ್ಟ ಕಾಲದಲ್ಲಿ ನಡೆಯುತ್ತಿರುವ ಈ ವರ್ಷದ ನಾಡಹಬ್ಬವು ಯಾವುದೇ ವಿಘ್ನವಿಲ್ಲದೆ ನಡೆಯಲಿ. ಆ ತಾಯಿ ಚಾಮುಂಡೇಶ್ವರಿ ಕರುಣೆ ಎಲ್ಲರ ಮೇಲೆ ಇರಲಿ ಎಂದು ಶುಭ ಹಾರೈಸಿದರು.

ಚಾಮುಂಡಿಬೆಟ್ಟದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ನಾಡಹಬ್ಬಕ್ಕೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ ಜೋಷಿ, ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಜೊತೆಗೆ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಿ.ಟಿ.ರವಿ ಮುಂತಾದವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Comments

Leave a Reply

Your email address will not be published. Required fields are marked *