ಉಡುಪಿಯಲ್ಲಿ ಮಾನ್ಸೂನ್ ಅಬ್ಬರ- ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ಉಡುಪಿ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಮುಂಗಾರು ಮಳೆ ಅಬ್ಬರಿಸುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಕಳೆದ ರಾತ್ರಿಯಿಂದ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದೆ. ಜಿಲ್ಲೆಯಾದ್ಯಂತ ಕಾರ್ಮೋಡ ಆವರಿಸಿದ್ದು, ಮಳೆ ಮುಂದುವರಿಯುವ ಸಾಧ್ಯತೆ ಇದೆ. ಕಾಪು, ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಅತಿಹೆಚ್ಚು ಮಳೆಯಾಗಿದೆ. ವಿಪರೀತ ಗಾಳಿ ಮಳೆಗೆ ಕಾರ್ಕಳ ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ಉಡುಪಿ ಜಿಲ್ಲೆಯಾದ್ಯಂತ ಭಾನುವಾರ ಕೂಡ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಸೋಮವಾರ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ನದಿ ಪಾತ್ರದ ಜನರಿಗೆ ಎಚ್ಚರಿಕೆ ರವಾನಿಸಲಾಗಿದೆ. ಅಲ್ಲದೇ ಸಮುದ್ರ ತೀರಕ್ಕೆ ಸ್ಥಳೀಯರು ಯಾರೂ ತೆರಳದಂತೆ ಸೂಚಿಸಲಾಗಿದೆ.

ನಗರ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಚರಂಡಿಗಳು ಉಕ್ಕಿ ಹರಿದಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಪರಿಣಾಮ ಜನ ಸಂಚಾರಕ್ಕೂ ಕೊಂಚ ವ್ಯತ್ಯಯ ಉಂಟಾಯಿತು. ಕುಂದಾಪುರ ಮತ್ತು ಬೈಂದೂರು ಭಾಗದಲ್ಲಿ ತಗ್ಗು ಪ್ರದೇಶದಲ್ಲಿರುವ ಅಂಗಡಿಗಳಿಗೆ ಮಳೆ ನೀರು ನುಗ್ಗಿ ಸಮಸ್ಯೆ ಉಂಟಾಯಿತು.

Comments

Leave a Reply

Your email address will not be published. Required fields are marked *