ಐಎಂಎ ಬಹುಕೋಟಿ ವಂಚನೆ ಪ್ರಕರಣ- ಪ್ರಮುಖ ಆರೋಪಿ ಮನ್ಸೂರ್ ಖಾನ್‍ಗೆ ಜಾಮೀನು

– ಜಾಮೀನು ಸಿಕ್ಕರೂ ಇಲ್ಲ ಬಿಡುಗಡೆ ಭಾಗ್ಯ

ಬೆಂಗಳೂರು: ಭಾರೀ ಸಂಚಲನ ಸೃಷ್ಟಿಸಿದ್ದ ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮನ್ಸೂರ್ ಖಾನ್‍ಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನೀಡಿದೆ.

ಮನ್ಸೂರ್ ಖಾನ್ ವಿರುದ್ಧ ಇಡಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಕೆಲ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.

ಅಧೀನ ನ್ಯಾಯಾಲಯ ಸೂಚಿಸಿದಾಗ ವಿಚಾರಣೆಗೆ ಹಾಜರಾಗಬೇಕು, ಯಾವುದೇ ಕಾರಣಕ್ಕೂ ಸಾಕ್ಷ್ಯ ನಾಶ ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಪ್ರಕರಣದ ವಿಚಾರಣೆ ಮುಗಿಯುವ ವರೆಗೆ ಆಸ್ತಿ ವಿಲೇವಾರಿ ಮಾಡುವಂತಿಲ್ಲ. 15 ದಿನಗಳಿಗೊಮ್ಮೆ ಇಡಿ ಕಚೇರಿಗೆ ಭೇಟಿ ನೀಡಿ ಸಹಿ ಹಾಕಬೇಕು. ಟ್ರಯಲ್ ಕೋರ್ಟ್ ಅನುಮತಿ ಇಲ್ಲದೆ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಹೋಗುವಂತಿಲ್ಲ ಎಂಬುದು ಸೇರಿದಂತೆ ಇತರ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.

ಈ ಮೂಲಕ ಬಂಧನವಾಗಿ 15 ತಿಂಗಳ ನಂತರ ಮನ್ಸೂರ್ ಖಾನ್‍ಗೆ ಜಾಮೀನು ಸಿಕ್ಕಂತಾಗಿದೆ. ಸದ್ಯ ಇಡಿ ದಾಖಲಿಸಿದ್ದ ಪ್ರಕರಣದಲ್ಲಿ ಮಾತ್ರ ಜಾಮೀನು ಸಿಕ್ಕಿದೆ. ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ಸಿಕ್ಕಿಲ್ಲ. ಹೀಗಾಗಿ ಈ ಪ್ರಕರಣದಲ್ಲಿ ಜಾಮೀನು ಸಿಕ್ಕರೂ ಮನ್ಸೂರ್ ಖಾನ್ ಗೆ ಬಿಡುಗಡೆಯ ಭಾಗ್ಯ ಇಲ್ಲದಂತಾಗಿದೆ.

ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ ಪ್ರಾಥಮಿಕ ತನಿಖೆ ನಡೆಸಲಾಗಿತ್ತು. ಜಾರಿ ನಿದೇಶನಾಲಯ(ಇಡಿ) ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಪ್ರಕರಣದ ಕುರಿತು ಸ್ಫೋಟಕ ಮಾಹಿತಿಯನ್ನು ಮನ್ಸೂರ್ ಬಾಯ್ಬಿಟ್ಟಿದ್ದ. 1000ಕ್ಕೂ ಹೆಚ್ಚು ಕೋಟಿ ಮೌಲ್ಯದ ವ್ಯವಹಾರದ ರಹಸ್ಯ ವಿವರವನ್ನು ಇಡಿ ಅಧಿಕಾರಿಗಳು ಪಡೆದಿದ್ದಾರೆ ಎನ್ನಲಾಗಿತ್ತು. ಅಲ್ಲದೆ ಕೆಲ ಪ್ರಭಾವಿಗಳ ಹೆಸರುಗಳನ್ನು ಕೂಡ ಮನ್ಸೂರ್ ಪ್ರಸ್ತಾಪಿಸಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿತ್ತು.

ಗ್ರಾಹಕರಿಗೆ ವಂಚಿಸಿದ್ದು ಹೇಗೆ?
ಐಎಂಎ ಜ್ಯುವೆಲ್ಸ್ ಚಿನ್ನ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು.’

ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ ಕಳೆದ ಏಪ್ರಿಲ್, ಮೇ ತಿಂಗಳಿನಲ್ಲಿ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದ್ದರು.

Comments

Leave a Reply

Your email address will not be published. Required fields are marked *