ಕಂಪ್ಲಿ-ಗಂಗಾವತಿ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆ

– ಹಂಪಿಯ ಹಲವು ಸ್ಮಾರಕಗಳು ಜಲಾವೃತ

ಬಳ್ಳಾರಿ: ಜಿಲ್ಲೆಯ ಕಂಪ್ಲಿ ಪಟ್ಟಣದ ಸಮೀಪದ ತುಂಗಭದ್ರಾ ನದಿಗೆ 1.12 ಲಕ್ಷ ಕ್ಯೂಸೆಕ್ ನೀರು ಬಿಟ್ಟ ಹಿನ್ನೆಲೆಯಲ್ಲಿ ಅಪಾಯದ ಮಟ್ಟ ಮೀರಿ ತುಂಗಭದ್ರಾ ನದಿ ಹರಿಯುತ್ತಿದೆ. ಇದರಿಂದ ಕಂಪ್ಲಿ-ಗಂಗಾವತಿ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗಿದೆ.

ಸೇತುವೆ ಮುಳುಗಡೆಯಾದ ಹಿನ್ನೆಲೆಯಲ್ಲಿ ಕಂಪ್ಲಿ-ಗಂಗಾವತಿ ಸಂಪರ್ಕ ಬಂದ್ ಆಗಿದೆ. ಅಲ್ಲದೇ ಸ್ಥಳದಲ್ಲಿ ಅಧಿಕಾರಿಗಳು ಮತ್ತು ಪೊಲೀಸರು ಬಿಡುಬಿಟ್ಟಿದ್ದಾರೆ. ಇನ್ನೂ ಅಪಾಯದ ಮಟ್ಟ ಮೀರಿ ತುಂಗಭದ್ರಾ ನದಿ ಹರಿಯುತ್ತಿರುವುದರಿಂದ ನದಿ ಪಾತ್ರದಲ್ಲಿರುವ 54 ಕುಟುಂಬಗಳನ್ನು ತಾತ್ಕಾಲಿಕವಾಗಿ ಬೇರೆ ಕಡೆ ಸ್ಥಳಾಂತರ ಮಾಡಲು ಪೊಲೀಸರು ನಿರ್ಧಾರ ಮಾಡಿದ್ದಾರೆ.

ಇತ್ತ ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ 20 ಕ್ರಸ್ಟ್ ಗೇಟ್‍ಗಳ ಮೂಲಕ ನೀರನ್ನು ನದಿಗೆ ಹರಿಬಿಡಲಾಗಿದೆ. ಪರಿಣಾಮ ಹಂಪಿಯ ಹಲವು ಸ್ಮಾರಕಗಳು ಮುಳುಗಡೆಯಾಗಿವೆ. ಪುರಂದರ ದಾಸರ ಮಂಟಪ, ಸಾಲುಮಂಟಪ, ಧಾರ್ಮಿಕ ವಿಧಿಗಳನ್ನು ಮಾಡುವ ಮಂಟಪಗಳು ಸೇರಿದಂತೆ ಹಲವು ಸ್ಮಾರಕ ಮುಳುಗಡೆಯಾಗಿವೆ. ಅಲ್ಲದೇ ಜಿಲ್ಲಾಡಳಿತ ಹಂಪಿಯಿಂದ ವಿರೂಪಾಪುರಗಡ್ಡೆ ತೆರಳು ಬೋಟ್ ಸ್ಥಗಿತಗೊಳಿಸಿದೆ. ನದಿಯಲ್ಲಿ ತೆಪ್ಪ ಹಾಕದಂತೆಯೂ ಎಚ್ಚರಿಕೆ ನೀಡಿದೆ.

ಜಿಲ್ಲೆಯಲ್ಲಿ ಅಷ್ಟೇನೂ ಮಳೆಯಾಗಿಲ್ಲ. ಆದರೆ ಮಲೆನಾಡಿನಲ್ಲಿ ಸುರಿಯುತ್ತಿರೋ ಮಳೆಯಿಂದಾಗಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯದಿಂದ ನೀರು ಬಿಟ್ಟ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವುದಕ್ಕೆ ಜಿಲ್ಲಾಡಳಿತ ಆದೇಶ ನೀಡಿದೆ.

Comments

Leave a Reply

Your email address will not be published. Required fields are marked *