ಕರ್ನಾಟಕದ ವಿರುದ್ಧ ಕೇಂದ್ರಕ್ಕೆ ದೂರು ಕೊಟ್ಟ ಕೇರಳ ಸಿಎಂ

ತಿರುವನಂತಪುರಂ: ಕೇರಳ- ಕರ್ನಾಟಕದ ಹಲವು ಗಡಿಗಳನ್ನು ಬಂದ್ ಮಾಡಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸೋಮವಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಗಡಿ ಬಂದ್ ಮಾಡಲಾಗಿದೆ ಎಂದು ಆರೋಪಿಸಿರುವ ಅವರು, ಅಂತರಾಜ್ಯ ಗಡಿ ಬಂದ್ ಮಾಡಿ, ವಾಹನಗಳ ಸಂಚಾರಕ್ಕೆ ತಡೆಯೊಡ್ಡುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ. ಅಂತರಾಜ್ಯ ಪ್ರಯಾಣಕ್ಕೆ ಯಾವುದೇ ರಾಜ್ಯ ನಿರ್ಬಂಧ ಹೇರುವಂತಿಲ್ಲ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಆರ್ ಟಿಪಿಸಿಆರ್ ನೆಗೆಟಿವ್ ವರದಿ ತೋರಿಸಿದರೆ ಮಾತ್ರ ಕರ್ನಾಟಕದೊಳಗೆ ಬಿಡುವಂತೆ ಸರ್ಕಾರ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ನಮ್ಮ ರಾಜ್ಯದ ಪೊಲೀಸ್ ಮುಖ್ಯಸ್ಥರು ಕರ್ನಾಟಕ ಡಿಜಿಪಿ ಗಮನಕ್ಕೆ ತಂದಿದ್ದು, ಅಗತ್ಯ ವಸ್ತುಗಳನ್ನು ಸಾಗಿಸುವ ವಾಹನಗಳು ಮುಕ್ತವಾಗಿ ಸಂಚರಿಸಬಹುದಾಗಿದೆ ಎಂದು ತಿಳಿಸಿರುವುದಾಗಿ ಪಿಣಿರಾಯಿ ವಿಜಯನ್ ಉಲ್ಲೇಖಿಸಿದ್ದಾರೆ.

ಈ ಬಗ್ಗೆ ಕೇರಳ ಸರ್ಕಾರ ಕರ್ನಾಟಕ ಸರ್ಕಾರದೊಂದಿಗೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಲಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೂ ತರಲಾಗುವುದು ಕೇರಳ ಸಿಎಂ ಹೇಳಿದ್ದಾರೆ.

ಕೊರೊನಾ ಆರಂಭದಲ್ಲಿ ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದಾಗ ಕೇರಳ ಸರ್ಕಾರ ಸಹ ನಮ್ಮ ರಾಜ್ಯದ ಪ್ರಯಾಣಿಕರ ಮೇಲೆ ನಿರ್ಬಂಧ ಹೇರಿ ಗಡಿಯನ್ನು ಬಂದ್ ಮಾಡಿತ್ತು. ಇದೀಗ ಕೇರಳ ಸರ್ಕಾರ ಕರ್ನಾಟಕದ ವಿರುದ್ಧ ಕೇಂದ್ರ ಸರ್ಕಾರಕ್ಕೆ ದೂರು ನೀಡಿದೆ.

Comments

Leave a Reply

Your email address will not be published. Required fields are marked *