ಮಂಗಳೂರು: ನೆರೆಯ ಕೇರಳದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಾಸರಗೋಡಿಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು ಕೊರೊನಾ ಪಾಸಿಟಿವಿಟಿ ಪ್ರಕರಣಗಳು ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿಯೂ ಹೆಚ್ಚಾಗುತ್ತಿದೆ. ಜಿಲ್ಲೆಯ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕೊರೊನಾ ಸೋಂಕು ಹರಡದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದರೊಂದಿಗೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ. ಆಗಸ್ಟ್ 1 ರಿಂದ 7 ದಿನ ಮಂಗಳೂರಿನಿಂದ ಕೇರಳ ರಾಜ್ಯದ ಕಾಸರಗೋಡಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ ಹಾಗೂ ಖಾಸಗಿ ಬಸ್‍ಗಳ ಸಂಚಾರವನ್ನು ನಿಲ್ಲಿಸಬೇಕು. ಕೇರಳದಿಂದ ಜಿಲ್ಲೆಗೆ ಬರುವ ವಿದ್ಯಾರ್ಥಿಗಳಲ್ಲಿ ಕಡ್ಡಾಯವಾಗಿ ಆರ್‍ಟಿಪಿಸಿಆರ್ ನೆಗೆಟಿವ್ ವರದಿ ಇರಬೇಕು, ಮುಖ್ಯವಾಗಿ ಅಲ್ಲಿನ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ತಾವಿರುವ ವಿದ್ಯಾರ್ಥಿನಿಲಯಗಳಲ್ಲಿಯೇ ಒಂದು ವಾರ ಹೋಂ ಕ್ವಾರಂಟೈಂನಲ್ಲಿಯೇ ಇರಬೇಕು. ಪ್ರತಿ ದಿನ ಅವರುಗಳ ಬಗ್ಗೆ ನಿಗಾ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಕೊರೊನಾ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ- ಸಿಎಂ ಸೂಚನೆ

ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ತಪಾಸಣೆಗೆ ಮತ್ತಷ್ಟು ಕ್ರಮಕೈಗೊಳ್ಳಬೇಕು. ಕೋವಿಡ್ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗಳಿಗೆ ದಾಖಲಿಸಬೇಕು. ಸೋಂಕಿತರು ಅನಗತ್ಯವಾಗಿ ಓಡಾಡುವುದು ಕಂಡುಬಂದಲ್ಲಿ ಅಂತವರ ವಿರುದ್ಧ ಎಫ್‍ಐಆರ್ ದಾಖಲಿಸಬೇಕು. ಒಂದೇ ಕುಟುಂಬದಲ್ಲಿ 2ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬಂದಲ್ಲಿ ಅಂತಹ ಮನೆಯನ್ನು ಮೈಕ್ರೋ ಕಂಟೈಂಮೆಂಟ್ ಝೋನ್ ಎಂದು ಪರಿಗಣಿಸಬೇಕು ಎಂದರು.

ರಸ್ತೆಗಳಲ್ಲಿ ಮಾಸ್ಕ್ ಧರಿಸದೇ ಓಡಾಡುವಂತಹ ಸಾರ್ವಜನಿಕರ ಮೇಲೆ ದಂಡ ವಿಧಿಸಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿಸಬೇಕು ಮತ್ತು ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಅವರಲ್ಲಿ ಅರಿವು ಮೂಡಿಸಬೇಕು. ಕೋವಿಡ್ ಸೋಂಕಿತರು ಹೋಂ ಕ್ವಾರಂಟೈಂನ್‍ನಲ್ಲಿ ಇರುವ ಬಗ್ಗೆ ಸಂಬಂಧಿಸಿದ ತಹಶೀಲ್ದಾರ್‍ಗಳು ಮತ್ತು ತಾಲೂಕು ವೈದ್ಯಾಧಿಕಾರಿಗಳು ಸೂಕ್ತ ನಿರ್ಣಯ ಕೈಗೊಳ್ಳಬೇಕು. ಕೋವಿಡ್ ಲಸಿಕೆಯನ್ನು ತೆಗೆದುಕೊಳ್ಳುವಂತಹ ಸ್ಥಳಗಳಲ್ಲಿ ಜನಸಂದಣಿ ಕಂಡುಬರುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಶೇ.60 ಆನ್‍ಲೈನ್ ರಿಜಿಸ್ಟ್ರೇಷನ್ ಮತ್ತು ಶೇ.40 ನೇರವಾಗಿ ಹಾಗೂ 18 ವರ್ಷ ಮೇಲ್ಟಟ್ಟವರಿಗೆ ಶೇ. 80 ಆನ್‍ಲೈನ್ ರಿಜಿಸ್ಟ್ರೇಷನ್ ಮತ್ತು ಶೇ. 20 ನೇರವಾಗಿ ಲಸಿಕೆಯನ್ನು ನೀಡಬೇಕು ಎಂದು ತಿಳಿಸಿದರು.

ಮಹಾನಗರಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಖುಷಿಕೇಷ್ ಭಗವಾನ್ ಸೋನಾವಣೆ ಹಾಗೂ ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ವೇದಿಕೆಯಲ್ಲಿದ್ದರು.
ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್, ಉಪವಿಭಾಗಾಧಿಕಾರಿ, ತಹಶೀಲ್ದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳಿದ್ದರು.

Leave a Reply