ಕೇಂದ್ರವೇ RBIನಿಂದ ಸಾಲ ಪಡೆದು ರಾಜ್ಯಗಳ ನಷ್ಟ ಪರಿಹಾರ ತುಂಬಿ ಕೊಡಲಿ: ಎಚ್‍ಡಿಕೆ

ಬೆಂಗಳೂರು: ರಾಜ್ಯಗಳಿಗೆ ಸಾಲ ಕೊಡಿಸುವ ಬದಲು ಕೇಂದ್ರವೇ ಆರ್‌ಬಿಐನಿಂದ ಸಾಲ ಪಡೆದು ರಾಜ್ಯಗಳಿಗೆ ನಷ್ಟ ಪರಿಹಾರ ತುಂಬಿ ಕೊಡಲಿ ಎಂದು ಕುಮಾರಸ್ವಾಮಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದರು.

ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೊದಲಿಗೆ “ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮೇಲೆ ಗದಾಪ್ರಹಾರ ಮಾಡುವ ಮೂಲಕ ಹೊಣೆಗೇಡಿತನ ಪ್ರದರ್ಶಿಸಿರುವುದು ತೀವ್ರ ಖಂಡನೀಯ” ಎಂದು ಆಗ್ರಹಿಸಿದ್ದಾರೆ.

ಕೊರೊನಾ ಸಂಕಷ್ಟ ‘ದೇವರ ಅಸಮಾನ್ಯ ಆಟ’ ಎನ್ನುವ ಮೂಲಕ ಒಕ್ಕೂಟ ವ್ಯವಸ್ಥೆಯ ರಾಜ್ಯಗಳ ಬಹುದೊಡ್ಡ ನಂಬಿಕೆಗೆ ಕೊಡಲಿಪೆಟ್ಟು ಕೊಟ್ಟಿದೆ. ಸುಲಭದ ಬಡ್ಡಿದರದಲ್ಲಿ ಸಾಲ ತೆಗೆದುಕೊಳ್ಳಿ. ಪಡೆದ ಸಾಲವನ್ನು ರಾಜ್ಯಗಳೇ ತೀರಿಸಿ ಎನ್ನುವ ಆಯ್ಕೆ ಮುಂದಿಟ್ಟು ರಾಜ್ಯಗಳ ಆರ್ಥಿಕತೆಗೆ ಕೇಂದ್ರ ಸರ್ಕಾರ ‘ಕೊಳ್ಳಿ’ ಇಟ್ಟಿದೆ ಎಂದಿದ್ದಾರೆ.

ಯಾವುದೇ ಪ್ರಲೋಭನೆ ಒಡ್ಡುವ ಮೂಲಕ ರಾಜ್ಯಗಳ ಆರ್ಥಿಕತೆಯ ವ್ಯವಸ್ಥೆ ಮೇಲೆ ನಿಯಂತ್ರಣ ಸಾಧಿಸುವ ಕಾನೂನು, ತಿದ್ದುಪಡಿ ಮಸೂದೆಗಳು ಭವಿಷ್ಯದಲ್ಲಿ ಒಕ್ಕೂಟ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಅಪಾಯ ಇಲ್ಲದಿಲ್ಲ ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಪಾದಿಸಿದ್ದರು. ಇಂತಹದೊಂದು ಅಪಾಯ ಈಗ ಎದುರಾಗಿದೆ ಎಂದರು.

ಈಗ ಸಂಗ್ರಹವಾಗಿರುವ ತೆರಿಗೆಯಲ್ಲಿ ರಾಜ್ಯ ಸರ್ಕಾರಗಳಿಗೆ ಪರಿಹಾರ ನೀಡಲು 97 ಸಾವಿರ ಕೋಟಿ ರೂ. ಹಾಗೂ ಆದಾಯ ಕೊರತೆ ಎದುರಾಗಲಿರುವ 2.35 ಲಕ್ಷ ಕೋಟಿ ರೂಪಾಯಿಗಳನ್ನು ರಾಜ್ಯಗಳು ಸಾಲ ಪಡೆಯುವ ಆಯ್ಕೆಗಳನ್ನು ಮುಂದಿಟ್ಟಿದೆ” ಎಂದು ತಿಳಿಸಿದ್ದಾರೆ.

“ಕೊಟ್ಟವ ಕೋಡಂಗಿ, ಇಸ್ಕೊಂಡವ ಈರಭದ್ರ” ಎಂಬಂತೆ ರಾಜ್ಯ ಸರ್ಕಾರಗಳು ಕಣ್ಣುಬಾಯಿ ಬಿಡುತ್ತಿವೆ. ಈಗ ಕೊರೊನಾ ನೆಪ ಮುಂದಿಟ್ಟು ಅನ್ಯಾಯ ಮಾಡಿಬಿಟ್ಟರೆ ರಾಜ್ಯ ಸರ್ಕಾರಗಳು ಏನು ಮಾಡಬೇಕು? ಎಂದು ಪ್ರಶ್ನಿಸಿದರು. ಕೋವಿಡ್ 19 ಮತ್ತು ನೆರೆಯಿಂದ ಬಳಲಿರುವ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿವೆ.

ತಾಳ ತಪ್ಪಿದ ಕೇಂದ್ರ ಸರ್ಕಾರದ ದಿಕ್ಕೆಟ್ಟ ಅರ್ಥವ್ಯವಸ್ಥೆ ಮತ್ತು ಮುನ್ನೋಟದ ಅಂದಾಜು ಗ್ರಹಿಸದ ವೈಫಲ್ಯದ ಫಲವಾಗಿ ರಾಜ್ಯ ಸರ್ಕಾರಗಳು ಹಗ್ಗ ಕೊಟ್ಟು ಕೈ ಕಟ್ಟಿಸಿಕೊಂಡ ಪರಿಸ್ಥಿತಿಗೆ ಸಿಲುಕಿ ನಲುಗುತ್ತಿವೆ. ರಾಜ್ಯಗಳಿಗೆ ಸಾಲ ಕೊಡಿಸುವ ಬದಲು ಕೇಂದ್ರವೇ ಆರ್‌ಬಿಐನಿಂದ ಸಾಲ ಪಡೆದು ರಾಜ್ಯಗಳಿಗೆ ನಷ್ಟ ಪರಿಹಾರ ತುಂಬಿ ಕೊಡಲಿ” ಎಂದು ಕುಮಾರಸ್ವಾಮಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದರು.

“ಅಷ್ಟಮಿ ನವಮಿ ಎಂಬ ಕಲ್ಪಿತವೇಕೋ ಶರಣಂಗೆ, ತಪ್ಪಿತ್ತು ಗಣಪದವಿ, ಲಿಂಗಕ್ಕೆ ದೂರ. ಒಬ್ಬರಿಗಾಳಾಗಿ, ಒಬ್ಬರನೋಲೈಸುವ ನಿರ್ಬುದ್ಧಿ ಮನುಜರನೇನೆಂಬೆ, ಕೂಡಲಸಂಗಮದೇವಾ ಬಸವಣ್ಣ” ಎಂದು ಕೊನೆಯಲ್ಲಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *