ಕೊರೊನಾ ಕಾಲದಲ್ಲಿ ಶಾಲೆ ತೆರೆಯಲು ಅವಸರವಿಲ್ಲ: ಸುರೇಶ್ ಕುಮಾರ್

ಬೆಂಗಳೂರು: ಕೊರೊನಾ ಸಾಂಕ್ರಾಮಿಕ ಪ್ರಸರಣದ ಈ ಕಾಲಘಟ್ಟದಲ್ಲಿ ಶಾಲೆಗಳನ್ನು ತೆರೆಯುವ ಅವಸರ ಸರ್ಕಾರದ ಮುಂದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಕೊರೊನಾ ಸಾಮಾಜಿಕ ಸಂದರ್ಭದಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣ ಮತ್ತು ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಮಂಗಳವಾರ ಶೈಕ್ಷಣಿಕ ವಲಯದಲ್ಲಿ ತೊಡಗಿಸಿಕೊಂಡಿರುವ ಸರ್ಕಾರೇತರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ವೆಬಿನಾರ್ ಸಂವಾದದಲ್ಲಿ ಮಾತನಾಡಿದ ಅವರು, ಈ ಸಾಮಾಜಿಕ ಪರಿಸ್ಥಿತಿಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಅವಸರದಲ್ಲಿ ಶಾಲೆ ತೆರೆಯುವುದಿಲ್ಲವಾದರೂ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳುವಲ್ಲಿ ಎಲ್ಲ ಆಯಾಮಗಳಿಂದಲೂ ಪ್ರಯತ್ನ ಮಾಡಲಾಗುತ್ತದೆ ಎಂದರು.

ವಿವಿಧ ಸರ್ಕಾರೇತರ 36ಕ್ಕೂ ಹೆಚ್ಚು ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ ವೆಬಿನಾರ್‌ನಲ್ಲಿ ಇಂತಹ ಪರಿಸ್ಥಿತಿಯಲ್ಲಿ ಯಾವ ರೀತಿಯಲ್ಲಿ ಮಕ್ಕಳ ಕಲಿಕೆಯ ನಿರಂತರತೆಗೆ ಮಾಡಬಹುದಾದ ಮತ್ತು ತಮ್ಮ ತಮ್ಮ ವ್ಯಾಪ್ತಿಯಲ್ಲಿ ತಾವು ಕೈಗೊಂಡಿರುವ ವಿವಿಧ ಉಪಕ್ರಮಗಳನ್ನು ಆಲಿಸಿದ ಸಚಿವರು ಇಂತಹ ಪರಿಸ್ಥಿತಿ ಇದೇ ಮೊದಲ ಬಾರಿ ಬಂದಿರುವುದರಿಂದ ಆ ನಿಟ್ಟಿನಲ್ಲಿ ಮಕ್ಕಳನ್ನು ತಲುಪಲು ಸಾಧ್ಯವಾಗಬಹುದಾದ ಎಲ್ಲ ಪ್ರಯತ್ನಗಳನ್ನು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದರು. ಇದನ್ನೂ ಓದಿ: ಕೆಲಸ ಕಳ್ಕೊಂಡು ತರಕಾರಿ ಮಾರಾಟ ಮಾಡ್ತಿದ್ದ ಟೆಕ್ಕಿಗೆ ಸೋನು ಸೂದ್ ಸಹಾಯ

ವಠಾರ ಶಾಲೆ, ಪಡಸಾಲೆ ಶಾಲೆ, ಮನೆಶಾಲೆ, ತಂತ್ರಜ್ಞಾನಾಧಾರಿತ ಶಿಕ್ಷಣ, ಆಕಾಶವಾಣಿ, ಚಂದನ ದೂರದರ್ಶನ ವಾಹಿನಿ, ಖಾಸಗಿ ವಾಹಿನಿ, ಶಿಕ್ಷಣ ಇಲಾಖೆಯ ಚಾನೆಲ್ ಸೇರಿದಂತೆ ಲಭ್ಯವಾಗಬಹುದಾದ ಎಲ್ಲ ಅವಕಾಶವನ್ನೂ ಮುಕ್ತವಾಗಿರಿಸಿಕೊಂಡು ಶಿಕ್ಷಣ ಇಲಾಖೆ ಎಲ್ಲ ಉಪಕ್ರಮಗಳತ್ತಲೂ ಮಕ್ಕಳ ಹಿತದೃಷ್ಟಿಯಿಂದ ಯೋಚಿಸುತ್ತಿದೆ ಎಂದು ಅವರು ಹೇಳಿದರು.

 

ಈ ಎಲ್ಲ ಸಾಮೂಹಿಕವಾದ ಪ್ರಯತ್ನಗಳು ಗಟ್ಟಿ ರೂಪ ಪಡೆದು ವಿಕೇಂದ್ರಿಕೃತ ಕಲಿಕೆಯು ಮಕ್ಕಳಿಗೆ ಉಪಯುಕ್ತವಾಗುವ ರೀತಿಯಲ್ಲಿ ನಮ್ಮ ಪ್ರಯತ್ನಗಳು ಇರಬೇಕೆನ್ನುವ ಅಭಿಪ್ರಾಯಗಳು ನಾವು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬಹುದಾದ ನಿರ್ಣಯಗಳಿಗೆ ಒಂದು ಸ್ಪಷ್ಟ ದಿಕ್ಕನ್ನು ಮೂಡಿಸಿವೆ. ಈ ಎಲ್ಲ ಸಲಹೆಗಳನ್ನು ಕ್ರೋಢಿಕರಿಸಿ, ದಾಖಲಿಸಿ ಆಯಾ ಸಂದರ್ಭ, ಆಯಾ ಪ್ರದೇಶಕ್ಕನುಗುಣವಾಗಿ ಜಾರಿಯಲ್ಲಿಡುವ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದು ಸುರೇಶ್‍ಕುಮಾರ್ ಅಭಿಪ್ರಾಯಪಟ್ಟರು.

Comments

Leave a Reply

Your email address will not be published. Required fields are marked *