ಕೊರೊನಾ ಸೋಂಕಿತ ಪೇದೆ ಆತ್ಮಹತ್ಯೆಗೆ ಸಿಎಂ ಬಿಎಸ್‍ವೈ ಸಂತಾಪ

– ವಾರಿಯರ್‌ಗಳಿಗೆ ಸಿಎಂ ಧೈರ್ಯ

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿತ ಪೇದೆ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದು, ಮುಖ್ಯಮಂತ್ರಿಯ ಬಿ.ಎಸ್.ಯಡಿಯೂರಪ್ಪ ಅವರು ಪೇದೆ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ” ಕರ್ನಾಟಕ ರಾಜ್ಯ ಮೀಸಲು ಪಡೆಯ ಬೆಂಗಳೂರು ನಗರದ 4ನೇ ಬೆಟಾಲಿಯನ್‍ನಲ್ಲಿ ಸಶಸ್ತ್ರ ಪೇದೆಯಾಗಿದ್ದ ಮಂಜೇಶ್ ಅವರು, ಕೋವಿಡ್ ಸೋಂಕು ದೃಢಪಟ್ಟ ಕಾರಣ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ದುಃಖಕರ” ಎಂದು ಟ್ವೀಟ್ ಮಾಡುವ ಮೂಲಕ ಪೇದೆ ಆತ್ಮಹತ್ಯೆ ಪ್ರಕರಣಕ್ಕೆ ಸಂತಾಪ ಸೂಚಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಭಗವಂತ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ. ಮೃತರ ಕುಟುಂಬಕ್ಕೆ ಸರ್ಕಾರದಿಂದ ದೊರಕಬಹುದಾದ ಎಲ್ಲ ಪರಿಹಾರ ಮತ್ತು ಸೌಲಭ್ಯಗಳನ್ನು ಶೀಘ್ರವಾಗಿ ಒದಗಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿರುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಪೊಲೀಸ್ ಸಿಬ್ಬಂದಿ ಕೋವಿಡ್ ಸಂಬಂಧಿತ ಕೆಲಸಗಳಲ್ಲಿ ಮುಂಚೂಣಿಯಲ್ಲಿ ವಾರಿಯರ್‌ಗಳಾಗಿ ಜೀವವನ್ನೇ ಪಣಕ್ಕಿಟ್ಟು ಶ್ಲಾಘನೀಯ ಕೆಲಸ ಮಾಡುತ್ತಿದ್ದಾರೆ. ಅವರಿಗಾಗಿಯೇ ಪ್ರತ್ಯೇಕ ಕೋವಿಡ್ ಪರೀಕ್ಷಾ ಕೇಂದ್ರ ಪ್ರಾರಂಭಿಸಲಾಗುತ್ತಿದೆ. ಸೋಂಕಿತರಿಗೆ ಅತ್ಯುತ್ತಮ ಚಿಕಿತ್ಸೆ ನೀಡಲು ಎಲ್ಲ ಕ್ರಮಗಳನ್ನೂ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

“ರಾಜ್ಯದಲ್ಲಿ ಒಟ್ಟಾರೆ, ಕೋವಿಡ್ ಸೋಂಕಿನಿಂದ ಮರಣ ಹೊಂದಿದವರ ಸಂಖ್ಯೆ ಇತರ ಪ್ರಮುಖ ರಾಜ್ಯಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ. ಯಾವುದೇ ಸೋಂಕಿತ ನಾಗರಿಕರು ಹಾಗೂ ಸರ್ಕಾರಿ ಸಿಬ್ಬಂದಿ ಯಾವುದೇ ಕಾರಣಕ್ಕೂ ಧೃತಿಗೆಡುವ ಅಗತ್ಯವಿಲ್ಲ. ಸರ್ಕಾರ ಸದಾ ನಿಮ್ಮ ಜೊತೆಗಿರುತ್ತದೆ” ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ

Comments

Leave a Reply

Your email address will not be published. Required fields are marked *