ನಾಲ್ಕು ಖಡಕ್ ಮಾತು ಆಡಿ, ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ – ಬಿಎಸ್‍ವೈಗೆ ಸಿದ್ದು ಸಂದೇಶ

ಬೆಂಗಳೂರು: ಕುರ್ಚಿ ಉಳಿಸಿಕೊಳ್ಳುವ ಕಸರತ್ತು ಬಿಟ್ಟು ರಾಜ್ಯದ ಹಿತರಕ್ಷಣೆಗಾಗಿ ಪ್ರಧಾನಿ ಮೋದಿ ಬಳಿ ಮಾತನಾಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೆಹಲಿಗೆ ತೆರಳಿರುವ ಸಿಎಂ ಬಿಎಸ್‍ವೈ ಸಂದೇಶ ನೀಡಿದ್ದಾರೆ.

ಇಂದು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ಕಾಡಿಬೇಡಿ ಕೊನೆಗೂ ಮೋದಿ ಭೇಟಿಗೆ ಅವಕಾಶ ಪಡೆದಿದ್ದೀರಿ. ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಖಡಕ್ ಆಗಿ ಕೇಳಲು ಬಳಸಿಕೊಳ್ಳಿ. ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ ಎಂದಿದ್ದಾರೆ.

ಸಿಎಂ ಅವರೇ, ಕಳೆದ ವರ್ಷದ ಅತಿವೃಷ್ಟಿಗೆ ರೂ.35000 ಕೋಟಿ ಪರಿಹಾರ ಕೇಳಿದ್ದೀರಿ, ಆದರೆ ಪ್ರಧಾನಿ ನೀಡಿದ್ದು 1,869 ಕೋಟಿ. ಈ ಬಾರಿ ರೂ.8000 ಕೋಟಿ ನಷ್ಟವಾಗಿದೆ ಎಂದು ಹೇಳುತ್ತಿದ್ದೀರಿ. ಕಳೆದ ವರ್ಷದ ಬಾಕಿ ಜೊತೆ ಈ ವರ್ಷದ ಪರಿಹಾರವನ್ನು ಉದಾರವಾಗಿ ಕೊಡುವಂತೆ ಕೇಳಿಕೊಳ್ಳಿ. 15ನೇ ಹಣಕಾಸು ಆಯೋಗದಿಂದ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಹೆಚ್ಚು ನಷ್ಟವಾಗಿರುವುದು ಕರ್ನಾಟಕ ರಾಜ್ಯಕ್ಕೆ. ಈ ಅನ್ಯಾಯಕ್ಕೆ ಕಾರಣವಾಗಿರುವ ಮಾನದಂಡಗಳನ್ನು ಪರಿಷ್ಕರಿಸಿ ತೆರಿಗೆ ಹಂಚಿಕೆ ಮತ್ತು ಎಸ್.ಡಿ.ಆರ್.ಎಫ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ಸಿಗುವಂತೆ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.

ಕೊರೊನಾ ಸೋಂಕಿನಲ್ಲಿ ವಿಶ್ವದಲ್ಲಿ ಭಾರತ, ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಗೆಲುವಿನ ಕಿರೀಟಗಳನ್ನೆಲ್ಲ ಮುಡಿಗೇರಿಸುವ ನರೇಂದ್ರ ಮೋದಿಯವರಿಗೆ ವೈಫಲ್ಯಗಳ ಹೊಣೆಯನ್ನು ರಾಜ್ಯಗಳ ಹೆಗಲ ಕಡೆ ಜಾರಿಸುವ ಚಾಳಿ ಇದೆ. ಪ್ರಧಾನಿಯವರಿಗೆ ಅವರಿಗೆ ಜವಾಬ್ದಾರಿ ನೆನಪಿಸಿ ರಾಜ್ಯಕ್ಕೆ ನ್ಯಾಯ ಕೊಡಿಸಿ. ಕೊರೊನಾ ನಿಯಂತ್ರಣದ ಸಾಮಗ್ರಿ ಖರೀದಿಯನ್ನು ಕೇಂದ್ರೀಕೃತಗೊಳಿಸಿರುವ ಪ್ರಧಾನಿಯವರು ಕರ್ನಾಟಕದ ಬೇಡಿಕೆಯ ಶೇಕಡಾ ಹತ್ತರಷ್ಟೂ ಪೂರೈಸಿಲ್ಲ. ವೆಂಟಿಲೇಟರ್ ಮತ್ತು ಆಮ್ಲಜನಕ ಪೂರೈಕೆಯ ಸಾಧನಗಳ ಕೊರತೆಯಿಂದ ಜನ ಸಾಯುತ್ತಿರುವುದನ್ನು ಗಮನಕ್ಕೆ ತಂದು ಮೋದಿಯವರ ಅವರ ಕಣ್ಣು ತೆರೆಸಿ ಎಂದು ಟ್ವೀಟೇಟು ನೀಡಿದ್ದಾರೆ.

ಪ್ರಧಾನಿಯವರು ಘೋಷಿಸಿದ್ದ ರೂ.20 ಲಕ್ಷ ಕೋಟಿ ಪ್ಯಾಕೇಜ್ ರಾಜ್ಯದ ಜನರನ್ನು ಇನ್ನೂ ತಲುಪಿಲ್ಲ. ಕೊರೊನಾ ಸೋಂಕಿಗಿಂತ ಹಸಿವು ಮತ್ತು ನಿರುದ್ಯೋಗದಿಂದ ಹೆಚ್ಚು ಜನ ಸಾವು-ನೋವಿಗೀಡಾಗುವ ಮೊದಲು, ಪ್ಯಾಕೇಜ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ನೀಡಲು ಒತ್ತಾಯಿಸಿ. ನ್ಯಾಯಬದ್ಧವಾಗಿ ರಾಜ್ಯಕ್ಕೆ ನೀಡಬೇಕಾಗಿರುವ ಜಿಎಸ್‍ಟಿ ಪರಿಹಾರ ರೂ.25,508 ಕೋಟಿ ನೀಡದೆ ದ್ರೋಹ ಬಗೆದಿರುವ ಪ್ರಧಾನಿಯವರು ಸಾಲ ಎತ್ತಲು ಮುಖ್ಯಮಂತ್ರಿ ಕೈಗೆ ಭಿಕ್ಷಾಪಾತ್ರೆ ನೀಡಿದ್ದಾರೆ. ಯಡಿಯೂರಪ್ಪ ಅವರೇ, ನಿಮ್ಮ ನಾಯಕರ ಎದೆಯಳತೆಯ ಮುಂದೆ ಮಣಿಯದೆ ಧೈರ್ಯದಿಂದ ಈ ಅನ್ಯಾಯ ಸರಿಪಡಿಸಲು ಹೇಳಿ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

Comments

Leave a Reply

Your email address will not be published. Required fields are marked *