ಬಿಎಸ್‍ವೈ, ಸುಧಾಕರ್ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಚಾಮರಾಜನಗರದಲ್ಲಿ ಸಂಭವಿಸಿದ ದುರಂತದಿಂದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದೀಗ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಸುಧಾಕರ್ ರಾಜೀನಾಮೆ ನೀಡುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಜನ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು. ಮೃತರ ಶೋಕತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಆಕ್ಸಿಜನ್ ಸಿಗದೆ ಉಂಟಾಗಿರುವ ಸರಣಿ ಸಾವುಗಳ ಮುಂದುವರೆದ ಭಾಗವಿದು. ಈ ಸಾವಿಗೆ ರಾಜ್ಯ ಸರ್ಕಾರ, ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಜಿಲ್ಲಾಡಳಿತವೇ ನೇರ ಹೊಣೆ.

ಇದು ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ. ರಾಜ್ಯದಲ್ಲಿ ಆಡಳಿತಯಂತ್ರ ಕುಸಿದುಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಬಿಜೆಪಿ ಅವರ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ. ಜನರ ಜೀವ ರಕ್ಷಿಸಲಾಗದ ಇಂಥಾ ಸರ್ಕಾರ ಇರುವುದಕ್ಕಿಂತ ತೊಲಗುವುದೇ ಲೇಸು.

ಮುಖ್ಯಮಂತ್ರಿ ಬಿಎಸ್‍ವೈ ಹಾಗೂ ಆರೋಗ್ಯ ಸಚಿವ ಸುಧಾಕರ್ ಅವರು ಪ್ರಕರಣದ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಈ ಪ್ರಕರಣದ ಬಗ್ಗೆ ಹೈಕೋರ್ಟ್‍ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಸಿಎಂ ಅವರನ್ನು ಒತ್ತಾಯಿಸುತ್ತೇನೆ ಎಂದು ಸರಣಿ ಟ್ವೀಟ್ ಮಾಡಿಕೊಂಡು ಬಿಜೆಪಿ ಕರ್ನಾಟಕ, ಸಿಎಂ ಆಫ್ ಕರ್ನಾಟಕ ಹಾಗೂ ಬಿಎಸ್‍ವೈ ಗೆ ಟ್ಯಾಗ್ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *