ಬ್ರಾಹ್ಮಣ ಸಮುದಾಯವರಿಗೆ ಜಾತಿ ಪ್ರಮಾಣ ಪತ್ರ ನೀಡಲು ಆದೇಶ

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಉದ್ಯೋಗ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೇ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಸರ್ಕಾರಿ ಆದೇಶ ಹೊರಡಿಸುವ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ.

 

ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಆದೇಶ ಹೊರಡಿಸಿದೆ. ಆರ್ಥಿಕವಾಗಿ ಹಿಂದುಳಿದ ಎಲ್ಲಾ ಸಮುದಾಯದವರ ಶ್ರೇಯೋಭಿವೃದ್ಧಿಯ ಹಿತದೃಷ್ಠಿಯಿಂದ ಆದೇಶ ಹೊರಡಿಸಿತ್ತು. ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ನಮ್ಮ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಈ ಆದೇಶದ ಅನುಷ್ಟಾನಕ್ಕಾಗಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡಲು ಸರ್ಕಾರಿ ಆದೇಶ ಹೊರಡಿಸುವ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗಗಳ ಕಲ್ಯಾಣ ನಮ್ಮ ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೇ ಸೌಕರ್ಯಗಳನ್ನೊಳಗೊಂಡಂತೆ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಿದೆ. ಆರ್ಥಿಕವಾಗಿ ಹಿಂದುಳಿದ ಅರ್ಹ ಬ್ರಾಹ್ಮಣರಿಗೆ ಸೂಕ್ತ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯು ಆದೇಶ ಹೊರಡಿಸಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಈ ಪ್ರಮಾಣ ಪತ್ರಗಳನ್ನು ಪರಿಗಣಿಸಲು ಅನುಮತಿ ನೀಡಲಾಗಿದೆ. ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಿಸಿಎಂ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *