ಮತ ಧ್ರುವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ – ಎಚ್‌ಡಿಕೆ

ಬೆಂಗಳೂರು: ಮತ ಧ್ರುವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಬೆಂಗಳೂರು ಉಗ್ರರ ತಾಣವಾಗುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿಕೆ ಸಂಬಂಧ ಸರಣಿ ಟ್ವೀಟ್‌ ಮಾಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಚ್‌ಡಿಕೆ ಹೇಳಿದ್ದು ಏನು?
ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿಜೆ ಹಳ್ಳಿ ಘಟನೆ ನಂತರ ಸಿಕ್ಕಿ ಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ, ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು. ಇದನ್ನೂ ಓದಿ: ಸದ್ಯಕ್ಕೆ ಬೆಂಗಳೂರಿಗಿಲ್ಲ ಎನ್‍ಐಎ ಪ್ರಾದೇಶಿಕ ಕಚೇರಿ

ಬೆಂಗಳೂರು ಉಗ್ರರ ಕೇಂದ್ರವಾಗಿದೆ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ. ಇಂಥ ಹೇಳಿಕೆಯನ್ನು ಸಮರ್ಥಿಸಲಾಗದೇ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಂಕಟ ಅನುಭವಿಸಿದ್ದನ್ನು ನಾನು ಮಾಧ್ಯಮದ ಮೂಲಕ ನೋಡಿದೆ. ಈ ಅಪ್ರಬುದ್ಧ ಹೇಳಿಕೆ ಬಿಜೆಪಿಯ ಹಿರಿಯರಿಗೆ ಮಾಡಿದ ಅಪಮಾನವೂ ಹೌದು.

ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರವಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧ್ರುವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು.

ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ. ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಬಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನಗಳೂ ಮೂಡುತ್ತಿವೆ. ಯಾಕೆಂದರೆ ಕೆಲ ಮಂದಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ.

ತೇಜಸ್ವಿ ಸೂರ್ಯ ಹೇಳಿದ್ದೇನು?
ಕೆಲ ವರ್ಷಗಳಿಂದ ಬೆಂಗಳೂರು ಉಗ್ರ ಚಟುವಟಿಕೆಗಳ ಕೇಂದ್ರ ಬಿಂದು ಆಗುತ್ತಿದೆ. ಈಗಾಗಲೇ ಎನ್‌ಐಎ ಹಲವಾರು ಉಗ್ರರನ್ನು ಬಂಧಿಸುವ ಮೂಲಕ ಇದು ಸಾಬೀತಾಗಿದೆ. ಹೀಗಾಗಿ ನಾನು ಗೃಹ ಸಚಿವ ಅಮಿತ್‌ ಶಾ ಅವರಲ್ಲಿ ಬೆಂಗಳೂರಿನಲ್ಲಿ ಎನ್‌ಐಎ ಕಚೇರಿ ತೆರೆಯುವಂತೆ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದ್ದರು.

 

Comments

Leave a Reply

Your email address will not be published. Required fields are marked *