ಮೋದಿ ವಿರುದ್ಧ ಪ್ರತಿಭಟಿಸಿದರೆ ಮೋಹನ್ ಭಾಗವತ್ ಸಹ ಟೆರರಿಸ್ಟ್- ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ರೈತರ ಪ್ರತಿಭಟನೆ ಕುರಿತು ಮೌನ ಮುರಿದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದಾರೆ.

ಇಂದು ರಾಷ್ಟ್ರಪತಿಗಳನ್ನು ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ, ಕೃಷಿ ಕಾನೂನುಗಳ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಅಂತ್ಯ ಹಾಡಲು ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಹುಲ್ ಗಾಂಧಿ, ಭಾರತದಲ್ಲಿ ಇಂದು ಪ್ರಜಾಪ್ರಭುತ್ವವಿಲ್ಲ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೋರಾಟ ನಡೆಸುವವರಿಗೆ ಭಯೋತ್ಪಾದಕರೆಂಬ ಹಣೆಪಟ್ಟಿ ಕಟ್ಟಲಾಗುತ್ತಿದೆ. ಆರ್ ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸಹ ಪ್ರಧಾನಿ ಮೋದಿ ವಿರುದ್ಧ ಮಾತನಾಡಿದರೆ ಭಯೋತ್ಪಾದಕ ಎಂದು ಕರೆಯುತ್ತಾರೆ ಎಂದು ಕಿಡಿಕಾರಿದ್ದಾರೆ. ಅಲ್ಲದೆ ಕೃಷಿ ಕಾನೂನುಗಳನ್ನು ತಕ್ಷಣವೇ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.

ಬಂಡವಾಳಶಾಹಿಗಳನ್ನು ಓಲೈಸಲು ಕೇಂದ್ರ ಸರ್ಕಾರ ಈ ರೀತಿ ಮಾಡುತ್ತಿದೆ. ಕ್ರೋನಿ ಕ್ಯಾಪಿಟಲ್ಸ್ ಗಳಿಗೆ ಪ್ರಧಾನಿ ಮೋದಿ ಹಣ ಮಾಡಿಕೊಡುತ್ತಿದ್ದಾರೆ. ಅಲ್ಲದೆ ಅವರ ವಿರುದ್ಧ ಮಾತನಾಡುವವರನ್ನು ಭಯೋತ್ಪಾದಕರು ಎಂದು ಕರೆಯುತ್ತಿದ್ದಾರೆ. ರೈತರು, ಕಾರ್ಮಿಕರು ಮಾತ್ರವಲ್ಲ ಆರ್ ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಯಾರೇ ಅವರ ವಿರುದ್ಧ ಮಾತನಾಡಿದರೂ ಭಯೋತ್ಪಾಕರ ಹಣೆಪಟ್ಟಿ ಕಟ್ಟಲಾಗುತ್ತಿದೆ ಎಂದು ಹರಿಹಾಯ್ದರು.

ಭಾರತದಲ್ಲಿ ಪ್ರಜಾಪ್ರಭುತ್ವ ಇಲ್ಲ, ಒಂದು ವೇಳೆ ನೀವು ಇದೆ ಎಂದುಕೊಂಡಿದ್ದರೆ ಅದು ನಿಮ್ಮ ಭ್ರಮೆ ಅಷ್ಟೆ. ಈ ಕಾನೂನುಗಳು ಕೋಟ್ಯಂತರ ರೈತರ ಜೀವನೋಪಾಯವನ್ನು ಕಸಿಯುತ್ತವೆ. ಸರ್ಕಾರ ಕೇವಲ ನಾಲ್ಕೈದು ಬಂಡವಾಳಶಾಯಿ ಉದ್ಯಮಿಗಳಿಗೆ ಮಾತ್ರ ಈ ಕಾನೂನುಗಳನ್ನು ರೂಪಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Comments

Leave a Reply

Your email address will not be published. Required fields are marked *