ಶೀಲಹಳ್ಳಿ ಸೇತುವೆ ಮತ್ತೆ ಮುಳುಗಡೆ – 8 ಗ್ರಾಮಗಳ ರಸ್ತೆ ಸಂಪರ್ಕ ಕಡಿತ

– ತುಂಬಿ ಹರಿಯುತ್ತಿರೋ ಕೃಷ್ಣಾ, ತುಂಗಭದ್ರೆ

ರಾಯಚೂರು: ಕೃಷ್ಣಾ ನದಿಯಲ್ಲಿ ನೀರು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನದಿ ಹಾದು ಹೋಗುವ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.

ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ 1 ಲಕ್ಷ 80 ಸಾವಿರ ಕ್ಯೂಸೆಕ್ ಒಳಹರಿವು ಇದ್ದು, ಜಲಾಶಯದಿಂದ ಈಗ 2 ಲಕ್ಷ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಹೀಗಾಗಿ ರಾಯಚೂರು ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಆತಂಕ ಹೆಚ್ಚಾಗಿದೆ.

ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮತ್ತೆ ಮುಳುಗಿದೆ. ಇದರಿಂದ ಸುಮಾರು ಎಂಟು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದೆ. ಜಲಾಶಯದಿಂದ ಹೊರಹರಿವು ಇನ್ನೂ ಹೆಚ್ಚಳವಾಗುವ ಸಾಧ್ಯತೆ ಇದೆ. ಜೊತೆಗೆ ಜಿಲ್ಲೆಯಲ್ಲಿ ಸತತ ಮೂರು ದಿನಗಳಿಂದ ಮಳೆ ಸುರಿಯುತ್ತಿರುವ ಹಿನ್ನೆಲೆ ಹಳ್ಳ ಕೊಳ್ಳಗಳ ನೀರಿನಿಂದ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗುವ ಆತಂಕವೂ ಇದೆ.

ತುಂಗಭದ್ರಾ ಜಲಾಶಯವೂ ಭರ್ತಿಯಾಗಿದ್ದು, ಹೆಚ್ಚು ಪ್ರಮಾಣದ ನೀರನ್ನ ಹೊರಬಿಡುವ ಸಾಧ್ಯತೆಗಳಿವೆ. ಹೀಗಾಗಿ ಜಿಲ್ಲೆಯಲ್ಲಿ ಒಂದು ಕಡೆ ಮಳೆ ಇನ್ನೊಂದೆಡೆ ಪ್ರವಾಹ ಭೀತಿ ಶುರುವಾಗಿದೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರದಿಂದ ಇರಲು ಜಿಲ್ಲಾಡಳಿತ ಸೂಚನೆ ನೀಡಿದೆ. ಜನ, ಜಾನುವಾರು ನದಿ ಹತ್ತಿರ ತೆರಳದಂತೆ ನದಿ ಪಾತ್ರದ ಗ್ರಾಮಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

Comments

Leave a Reply

Your email address will not be published. Required fields are marked *