ಸಾರಿಗೆ ನೌಕರರ ಮುಷ್ಕರ, ಸಾರ್ವಜನಿಕರಿಗೆ ಪರ್ಯಾಯ ವ್ಯವಸ್ಥೆ: ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್

ಚಿಕ್ಕಮಗಳೂರು: ರಾಜ್ಯಾದ್ಯಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರೋ ಹಿನ್ನೆಲೆ ಜಿಲ್ಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಹೇಳಿದರು.

ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಕೆ.ಎಸ್.ಆರ್.ಟಿ.ಸಿ ನೌಕರರ ಮುಷ್ಕರ ಕುರಿತ ತುರ್ತು ಸಭೆ ನಡೆಸಿ ಸಾರ್ವಜನಿಕರಿಗಾಗಿ ಪರ್ಯಾಯ ವ್ಯವಸ್ಥೆ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಮಾಡುವ ಮಾರ್ಗಗಳಲ್ಲಿ ಸಾರ್ವಜನಿಕರಿಗೆ ಅನಾನೂಕೂಲ ಆಗಬಾರದೆಂಬ ದೃಷ್ಠಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಗಳಿಂದ ಖಾಸಗಿ ಬಸ್ ಹಾಗೂ ಮ್ಯಾಕ್ಸಿ ಕ್ಯಾಬ್‍ಗಳು ಓಡಾಡಲು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.

ಜಿಲ್ಲೆಯ ಎಲ್ಲಾ ಸರ್ಕಾರಿ ಬಸ್ ನಿಲ್ದಾಣದಿಂದ ಖಾಸಗಿ ಬಸ್ಸುಗಳು ಸಂಚಾರ ಪ್ರಾರಂಭಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಖಾಸಗಿ ಬಸ್‍ಗಳು ಹಾಗೂ ಮ್ಯಾಕ್ಸಿ ಕ್ಯಾಬ್‍ಗಳು ಕೆ.ಎಸ್.ಆರ್.ಟಿ.ಸಿ. ಸಾರಿಗೆ ನಿಗಮ ನಿಗದಿಪಡಿಸಿರುವ ದರದಲ್ಲಿಯೇ ಪ್ರಯಾಣಿಕರನ್ನು ಕರೆದೊಯ್ಯಲು ಕಟ್ಟುನಿಟ್ಟಿನ ಕ್ರಮವಹಿಸುವಂತೆ ಸೂಚಿಸಲಾಗಿದೆ ಎಂದರು.

ಪ್ರಯಾಣಿಕರಿಂದ ಯಾವುದೇ ದೂರುಗಳು ಬಾರದಂತೆ ಕಾರ್ಯನಿರ್ವಹಿಸಬೇಕು ಎಂದು ಖಾಸಗಿ ಬಸ್ ಮಾಲೀಕರಿಗೂ ಸೂಚಿಸಿದರು. ಪ್ರಯಾಣಿಕರ ಭದ್ರತಾ ದೃಷ್ಠಿಯಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾದ್ಯಂತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನೂ ಕಲ್ಪಿಸಿರೋದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹೇಳಿದ್ದಾರೆ.

Comments

Leave a Reply

Your email address will not be published. Required fields are marked *