ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ- ತಕ್ಷಣ ತಡೆಹಿಡಿಯಲು ಸಚಿವ ಕೋಟ ಆದೇಶ

ಮಂಗಳೂರು: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪುತ್ತಿದ್ದು, ಇದನ್ನು ತಕ್ಷಣ ತಡೆ ಹಿಡಿಯಬೇಕು ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸೂಚಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಸರ್ಕಾರ ಬರುವ ಮುಂಚೆ ಇಲಾಖೆಯ ಮೂಲಕ ಮಂಜೂರಾಗುತ್ತಿರುವ ತಸ್ತೀಕ್ ಹಣ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ಕೂಡ ಬಿಡುಗಡೆ ಮಾಡುತ್ತಿರುವ ಬಗ್ಗೆ ಮಾಹಿತಿ ಒದಗಿದ್ದು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಯ ಮೂಲಕ ಹಿಂದೂ ಧರ್ಮವನ್ನು ಹೊರತುಪಡಿಸಿ ಅನ್ಯ ಉದ್ದೇಶಗಳಿಗೆ ಬಳಸುತ್ತಿರುವುದನ್ನು ತಕ್ಷಣ ತಡೆಹಿಡಿಯಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಹಿಂದೂ ಧಾರ್ಮಿಕ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇತರೆ ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳಿಗೆ ಹಣದ ಅವಶ್ಯಕತೆ ಇದ್ದಲ್ಲಿ ಆಯಾ ಇಲಾಖೆಯ ಜವಾಬ್ದಾರಿ ಹಾಗೂ ಆಯಾ ಇಲಾಖೆಯ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದರು.

ರಾಜ್ಯದಲ್ಲಿ 27 ಸಾವಿರಕ್ಕೂ ಹೆಚ್ಚು ಹಿಂದೂ ದೇವಸ್ಥಾನಗಳಿಗೆ ತಸ್ತೀಕ್ ನೀಡಲಾಗುತ್ತಿದ್ದು, ವಾರ್ಷಿಕ ಸುಮಾರು 133 ಕೋಟಿ ರೂ. ಅನುದಾನವನ್ನು ಸರ್ಕಾರ ಹಂಚುತ್ತಿದೆ. ಈ ಪೈಕಿ ಸುಮಾರು 764 ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳು ಇಲಾಖೆಯಿಂದ ತಸ್ತೀಕ್ ಪಡೆಯುತ್ತಿದ್ದು, ಮಂತ್ರಿಗಳ ಸೂಚನೆ ಮೇರೆಗೆ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ಹಣ ಬಿಡುಗಡೆ ಮಾಡುವುದನ್ನು ನಿಲ್ಲಿಸಲಾಗುವುದು. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರು ಸಹ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *