ಪಹಲ್ಗಾಮ್‌ ದಾಳಿ – ಪಾಕ್‌ ಉಗ್ರರ ಮಾಹಿತಿ ಕೊಟ್ಟವರಿಗೆ 20 ಲಕ್ಷ ಬಹುಮಾನ ಘೋಷಣೆ

ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ (Pahalgam Terror Attack) ಭಾಗಿಯಾದ ಪಾಕ್‌ (Pakistan) ಭಯೋತ್ಪಾದಕರ ಬಂಧನಕ್ಕೆ ನೆರವಾಗುವ ಮಾಹಿತಿ ಕೊಟ್ಟವರಿಗೆ ಪೊಲೀಸರು 20 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದಾರೆ.

ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಶಂಕಿತ ಮೂವರು ಉಗ್ರರ ರೇಖಾಚಿತ್ರಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಶಂಕಿತರಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳೆಂದು ಗುರುತಿಸಲಾಗಿದೆ. ಈ ಉಗ್ರರ ಬಂಧನಕ್ಕೆ ನೆರವಾಗುವ ಮಾಹಿತಿ ನೀಡಿದವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ – ಯೋಧ ಹುತಾತ್ಮ

ಶಂಕಿತರನ್ನು ಪಾಕಿಸ್ತಾನದ ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್, ಅಲಿ ಭಾಯಿ ಅಲಿಯಾಸ್ ತಲ್ಹಾ ಭಾಯಿ ಮತ್ತು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ನಿವಾಸಿ ಅಬ್ದುಲ್ ಹುಸೇನ್ ಥೋಕರ್ ಎಂದು ಗುರುತಿಸಲಾಗಿದೆ. ಮೂವರೂ ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಎ-ತೈಬಾದ ಸದಸ್ಯರಾಗಿದ್ದಾರೆ.

ಮಂಗಳವಾರ ಪಹಲ್ಗಾಮ್ ಬಳಿಯ ಬೈಸರನ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 25 ಭಾರತೀಯರು ಮತ್ತು ಒಬ್ಬ ನೇಪಾಳಿ ಪ್ರಜೆ ಸಾವನ್ನಪ್ಪಿದ್ದರು. ಇತ್ತೀಚಿನ ವರ್ಷಗಳಲ್ಲಿ ಈ ಪ್ರದೇಶದಲ್ಲಿ ನಾಗರಿಕರ ಮೇಲೆ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಇದು ಒಂದಾಗಿದೆ.

ದಾಳಿಯ ಬಳಿಕ ಬುಧವಾರ ಪ್ರಧಾನಿ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ತುರ್ತು ಸಭೆ ನಡೆಸಿ ಪಾಕಿಸ್ತಾನದ ವಿರುದ್ಧ ಐದು ಕ್ರಮಗಳನ್ನು ತೆಗೆದುಕೊಂಡಿದೆ. ಅದರಲ್ಲಿ ಪ್ರಮುಖವಾಗಿ, ಸಾರ್ಕ್ ವೀಸಾ ವಿನಾಯಿತಿ ಯೋಜನೆಯಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳು ಇನ್ನು ಮುಂದೆ ಭಾರತಕ್ಕೆ ಪ್ರಯಾಣಿಸಲು ಅನುಮತಿಸಲಾಗುವುದಿಲ್ಲ. ಈ ಯೋಜನೆಯಡಿಯಲ್ಲಿ ಅಸ್ತಿತ್ವದಲ್ಲಿರುವ ಎಲ್ಲಾ ವೀಸಾಗಳನ್ನು ರದ್ದುಗೊಳಿಸಲಾಗಿದ್ದು, ಪಾಕ್‌ ಪ್ರಜೆಗಳು 48 ಗಂಟೆಗಳ ಒಳಗೆ ಭಾರತವನ್ನು ತೊರೆಯಬೇಕು. ಭಾರತ ಮತ್ತು ಪಾಕಿಸ್ತಾನದ ನಡುವಿನ ಏಕೈಕ ಭೂ ಮಾರ್ಗ ಈಗ ಮುಚ್ಚಲಾಗಿದೆ. ಅಲ್ಲದೇ ಪಾಕಿಸ್ತಾನ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸುವವರೆಗೆ 1960ರ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದೆ. ಇದನ್ನೂ ಓದಿ: ಭಾರತದಿಂದ ದಾಳಿ ಭೀತಿ – ಕ್ಷಿಪಣಿ ಪರೀಕ್ಷೆಗೆ ಮುಂದಾದ ಪಾಕ್‌