ಸೈಟ್‌ ವಾಪಸ್‌ ನೀಡಲು ಮುಂದಾಗಿದ್ದು, ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ: ಆರ್‌.ಅಶೋಕ್‌

– ಸಿಎಂ ಸಿದ್ದರಾಮಯ್ಯ ಪತ್ನಿ ಪತ್ರದ ಬಗ್ಗೆ ಬಿಜೆಪಿ ನಾಯಕರ ಪ್ರತಿಕ್ರಿಯೆ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಪತ್ನಿ ಮುಡಾ ನಿವೇಶನಗಳನ್ನು ವಾಪಸ್‌ ನೀಡಲು ಮುಂದಾಗಿರುವ ಬಗ್ಗೆ ವಿಪಕ್ಷ ನಾಯಕ ಆರ್‌.ಅಶೋಕ್‌ (R.Ashok) ಪ್ರತಿಕ್ರಿಯೆ ನೀಡಿದ್ದಾರೆ. ಈ ನಿರ್ಧಾರವು ಸಂವಿಧಾನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ಜಯ ಎಂದು ಬಣ್ಣಿಸಿದ್ದಾರೆ.

ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ನಿರ್ಧಾರ ಕುರಿತು ಆರ್‌.ಅಶೋಕ್‌ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದು, ಸಿಎಂ ಸಿದ್ದರಾಮಯ್ಯನವರು ತಮ್ಮ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ಪಡೆದಿದ್ದ ಸೈಟುಗಳನ್ನು ವಾಪಸ್ ನೀಡುವ ‘ದೊಡ್ದ’ ಮನಸ್ಸು ಮಾಡಿರುವುದು‌ ಸಂವಿಧಾನವನ್ನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಡಾ ಸೈಟ್‌ ವಾಪಸ್‌ಗೆ ಸಿಎಂ ಪತ್ನಿ ನಿರ್ಧಾರ – ಕಾನೂನು ಹೋರಾಟದ ಪರಿಣಾಮ ಏನು?

ರಾಜ್ಯಪಾಲರ ನಿರ್ಧಾರವನ್ನ ಎತ್ತಿ ಹಿಡಿದ ನ್ಯಾಯಾಂಗಕ್ಕೆ ಸಿಕ್ಕ ದೊಡ್ಡ ಜಯ. ಜಗ್ಗಲ್ಲ, ಬಗ್ಗಲ್ಲ ಎಂದು ಅಧಿಕಾರದ ಮದದಿಂದ ಮೆರೆಯುತ್ತಿದ್ದವರ ವಿರುದ್ಧ ಬಾಬಾಸಾಹೇಬ್ ಅಂಬೇಡ್ಕರರ ಸಂವಿಧಾನಕ್ಕೆ ಸಿಕ್ಕ ದೊಡ್ಡ ಜಯ ಎಂದು ಬಿಜೆಪಿ ನಾಯಕ ಆರ್‌.ಅಶೋಕ್‌ ಅವರು ಅಭಿಪ್ರಾಯಪಟ್ಟಿದ್ದಾರೆ.

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ, ಇ.ಡಿ ಎಫ್‌ಐಆರ್‌ ಬೆನ್ನಲ್ಲೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ. 14 ನಿವೇಶನ ಹಿಂದಿರುಗಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ಮುಂದಾಗಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ನಿವೇಶನ, ಆಸ್ತಿ, ಸಂಪತ್ತು ನನ್ನ ಪತಿ ಘನತೆ, ಮರ್ಯಾದೆಗಿಂತ ದೊಡ್ಡದಲ್ಲ: ಸಿಎಂ ಪತ್ನಿ