ಬಸ್ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಸಾವು

ಬೆಂಗಳೂರು: ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ತಡರಾತ್ರಿ ನಡೆದಿದೆ.

ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ನಿವಾಸಿ ಸುನೀಲ್ ಕುಮಾರ್(40) ಮೃತ ದುರ್ದೈವಿ. ಇವರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದು, ಕೆಲಸ ಮುಗಿಸಿ ಮಧ್ಯರಾತ್ರಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.

ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ಸುಗಮ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್‍ವೊಂದು ವೇಗವಾಗಿ ಬಂದಿದ್ದು, ಕತ್ತಲೆ ಇದ್ದ ಕಾರಣ ನಡೆದುಕೊಂಡು ಹೋಗುತ್ತಿದ್ದ ಸುನೀಲ್ ಕುಮಾರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ಗಂಭೀರವಾಗಿ ಪೆಟ್ಟಾಗಿ ಸುನೀಲ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *