ಸರ್ಕಾರಿ ಕಾಲೇಜಿನಲ್ಲೇ ವಿದ್ಯಾರ್ಥಿನಿಯ ಮೇಲೆ ವಿದ್ಯಾರ್ಥಿಯಿಂದ ಅತ್ಯಾಚಾರ

ಜೈಪುರ: ಸರ್ಕಾರಿ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ನಾಗಾರ್ ಜಿಲ್ಲೆಯಲ್ಲಿ ಕಳೆದ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿಯನ್ನು ಖಾಸಗಿ ಕಾಲೇಜಿನ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು, ಸದ್ಯಕ್ಕೆ ಆತನ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಆದರೆ ಆರೋಪಿ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದಾನೆ. ಆತನಿಗೆ ಶೋಧಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯೂ ವಿದ್ಯಾರ್ಥಿಯಾಗಿದ್ದು, ಸರ್ಕಾರಿ ಕಾಲೇಜಿಗೆ ಬಂದು ತರಗತಿಯ ಕೊಠಡಿಯಲ್ಲಿ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸದ್ಯಕ್ಕೆ ಅತ್ಯಾಚಾರ ನಡೆದಿದೆ ಎನ್ನಲಾಗಿರುವ ಕಾಲೇಜು ಕೊಠಡಿಯನ್ನು ತನಿಖೆಯ ಉದ್ದೇಶಕ್ಕಾಗಿ ಪೊಲೀಸರು ಲಾಕ್ ಮಾಡಿದ್ದಾರೆ.

ಈ ಘಟನೆ ಸಂಬಂಧಿಸಿದಂತೆ ಕಾಲೇಜಿನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ವಶಪಡಿಸಿಕೊಂಡು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಇತ್ತೀಚೆಗಷ್ಟೇ ರಾಜಸ್ಥಾನದ ಜಲ್ವಾರ್ ಪ್ರದೇಶದಲ್ಲಿ ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ಈ ಘಟನೆಯ ಬಳಿಕವೇ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.

12 ವರ್ಷದ ಒಳಗಡೆ ಇರುವ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಮಸೂದೆಯನ್ನು ರಾಜಸ್ಥಾನದ ವಿಧಾನಸಭೆ ಮಾರ್ಚ್ ತಿಂಗಳಿನಲ್ಲಿ ಅಂಗಿಕರಿಸಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *