ಸಿಬಿಐ Vs ಮಮತಾ: ಮಂಗಳವಾರಕ್ಕೆ ಅರ್ಜಿ ಮುಂದೂಡಿಕೆ: ಸುಪ್ರೀಂನಲ್ಲಿ ಇಂದು ಏನಾಯ್ತು?

ನವದೆಹಲಿ: ಕೋಲ್ಕತ್ತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಬಂಧನಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿರುವ ತುರ್ತು ಮಧ್ಯಂತರ ಅರ್ಜಿ ವಿಚಾರಣೆಯನ್ನು ಮಂಗಳವಾರ ಸುಪ್ರೀಂ ಕೋರ್ಟ್ ನಡೆಸಲಿದೆ.

ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ರಾಜೀವ್ ಕುಮಾರ್ ಆರ್‌ಟಿಜಿಎಸ್‌ ಮೂಲಕ ನಡೆಸಿರುವ ವ್ಯವಹಾರದ ಸಾಕ್ಷ್ಯವನ್ನು ನಾಶ ಮಾಡಲು ಮುಂದಾಗಿದ್ದಾರೆ ಸಿಬಿಐ ಆರೋಪಿಸಿದೆ.

ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯ್, ಆರೋಪಗಳಿಗೆ ಸಾಕ್ಷ್ಯವನ್ನು ನೀಡಿ. ನಿಮ್ಮ ಆರೋಪದ ಪ್ರಕಾರವೇ ರಾಜೀವ್ ಕುಮಾರ್ ಸಾಕ್ಷ್ಯವನ್ನು ನಾಶ ಮಾಡುತ್ತಿದ್ದಾರೆ ಎಂದಾದರೆ ಈ ಪ್ರಕರಣವನ್ನು ನಾವು ಗಂಭೀರವಾಗಿ ಸ್ವೀಕರಿಸುತ್ತೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

 

ಸಿಬಿಐ ಪರವಾಗಿ ಸಾಲಿಸಿಟರ್ ಜನರಲ್ ತುಷರ್ ಮೆಹ್ತಾ ಹಾಜರಾಗಿ, ನಮ್ಮ ಅಧಿಕಾರಿಗಳನ್ನು ಪಶ್ಚಿಮ ಬಂಗಾಳದ ಪೊಲೀಸರು ಅಕ್ರಮವಾಗಿ ಒತ್ತೆಯಾಳುಗಳನ್ನಾಗಿ ಮಾಡಿಕೊಂಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಸಾಕಷ್ಟು ಬಾರಿ ಸಮನ್ಸ್ ಜಾರಿ ಮಾಡಿದರೂ ಹಾಜರಾಗುತ್ತಿಲ್ಲ. ಹೀಗಾಗಿ ಕೋಲ್ಕತ್ತಾ ಪೊಲೀಸ್ ಆಯುಕ್ತರು ಕೂಡಲೇ ಶರಣಾಗಬೇಕು ಎಂದು ವಾದಿಸಿದರು.

ಪಶ್ಚಿಮ ಬಂಗಾಳ ಸರ್ಕಾರದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಜರಾಗಿ ರಾಜೀವ್ ಕುಮಾರ್ ಈ ಪ್ರಕರಣದಲ್ಲಿ ಸಾಕ್ಷಿಯಾಗಿದ್ದಾರೆ ಹೊರತು ಆರೋಪಿಯಲ್ಲ ಎಂದು ತಿಳಿಸಿದರು. ಈ ವೇಳೆ ನಾಳಿನ ವಿಚಾರಣೆಯಲ್ಲಿ ತಮ್ಮ ವಾದಕ್ಕೆ ಪೂರಕ ಮಾಹಿತಿಯನ್ನು ನೀಡುವಂತೆ ಕೋರ್ಟ್ ಸಿಂಘ್ವಿಗೆ ಸೂಚಿಸಿತು.

ಕಳೆದ ಎರಡು ವರ್ಷಗಳಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಮಾಡುತ್ತಿದ್ದರೂ ರಾಜೀವ್ ಕುಮಾರ್ ವಿಚಾರಣೆ ಹಾಜರಾಗುತ್ತಿಲ್ಲ. ಅಷ್ಟೇ ಅಲ್ಲದೇ ಚುನಾವಣೆಗೆ ಸಂಬಂಧಿಸಿದಂತೆ ನಡೆದ ಸಭೆಗಳಿಗೂ ಅವರು ಹಾಜರಾಗಿಲ್ಲ ಎಂದು ಸಿಬಿಐ ಆರೋಪಿಸಿದೆ.

ಭಾನುವಾರ ಏನಾಯ್ತು?
ಭಾನುವಾರ ಸಂಜೆ 6.30ರ ವೇಳೆಗೆ ಕೋಲ್ಕತ್ತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ನಿವಾಸಕ್ಕೆ 40ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳ ತಂಡ ಆಗಮಿಸಿದೆ. ಈ ತಂಡ ಮನೆ ಪ್ರವೇಶಿಸಲು ಅವಕಾಶ ನೀಡಲಿಲ್ಲ. ಸುದ್ದಿ ತಿಳಿಯುತ್ತಲೇ ಪಶ್ಚಿಮ ಬಂಗಾಳ ಪೊಲೀಸ್ ಮಹಾನಿರ್ದೇಶಕ ಸೇರಿದಂತೆ ಹಿರಿಯ ಅಧಿಕಾರಿಗಳು ಧಾವಿಸಿದರು. ಈ ವೇಳೆ ಸಿಬಿಐ ಅಧಿಕಾರಿಗಳು ಮತ್ತು ಕೋಲ್ಕತ್ತಾ ಪೊಲೀಸರ ನಡುವೆ ಮಾತಿನ ಚಕಮಕಿ, ತಳ್ಳಾಟವೂ ನಡೆಯಿತು. ಅಂತಿಮವಾಗಿ 40 ಮಂದಿ ಅಧಿಕಾರಿಗಳ ಪೈಕಿ 15 ಮಂದಿಯನ್ನು ಜೀಪ್‍ನಲ್ಲಿ ಕುಳ್ಳಿರಿಸಿಕೊಂಡು ಹೋದರು.

ಸಿಬಿಐ ಅಧಿಕಾರಿಗಳು ಬಂದ ವಿಚಾರ ತಿಳಿಯುತ್ತಲೇ ಕೋಪಗೊಂಡ ಮಮತಾ ಬ್ಯಾನರ್ಜಿ ರಾಜೀವ್ ಕುಮಾರ್ ನಿವಾಸಕ್ಕೆ ಆಗಮಿಸಿ ಸುದ್ದಿಗೋಷ್ಠಿ ನಡೆಸಿದರು. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಪಶ್ಚಿಮ ಬಂಗಾಳದಲ್ಲಿ ದಂಗೆಗೆ ಕಾರಣವಾಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಮಮತಾ ಬ್ಯಾನರ್ಜಿ ಪ್ರತಿಭಟನೆಯ ವೇಳೆ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಧರಣಿ ಸ್ಥಳದಲ್ಲಿಯೇ ಕುಳಿತಿದ್ದರು.

ಸಿಬಿಐ ಹೋಗಿದ್ದು ಯಾಕೆ?
ಬಂಗಾಳ ಶಾರದಾ ಮತ್ತು ರೋಸ್ ವ್ಯಾಲಿ ಹಗರಣದ ತನಿಖೆಗೆ ವಿಶೇಷ ಪೊಲೀಸ್ ತಂಡ ರಚನೆಯಾಗಿದ್ದು, ಈ ತಂಡದ ನೇತೃತ್ವವನ್ನು ರಾಜೀವ್ ಕುಮಾರ್ ವಹಿಸಿದ್ದರು. ತನಿಖೆ ವಿಳಂಬವಾಗಿದ್ದ ಕಾರಣ ಸಿಬಿಐ ರಾಜೀವ್ ಕುಮಾರ್ ಮೇಲೆಯೇ ಶಂಕೆ ವ್ಯಕ್ತಪಡಿಸಿತ್ತು. ವಿಚಾರಣೆಗೆ ಹಾಜರಾಗುವಂತೆ ಸಿಬಿಐ ರಾಜೀವ್ ಕುಮಾರ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ಸಿಬಿಐ ರಾಜೀವ್ ಕುಮಾರ್ ಅವರನ್ನು ಬಂಧಿಸಲು ಭಾನುವಾರ ಅವರ ನಿವಾಸಕ್ಕೆ ತೆರಳಿತ್ತು.

ಸಿಬಿಐ ಹೇಳೋದು ಏನು?
ಸುಪ್ರೀಂ ಆದೇಶದ ಹಿನ್ನೆಲೆಯಲ್ಲಿ ಚಿಟ್‍ಫಂಡ್ ಹಗರಣದ ತನಿಖೆ ನಡೆದಿದೆ. ಈ ತನಿಖೆಗೆ ಯಾರ ಅನುಮತಿಯೂ ಬೇಕಿಲ್ಲ. ಸ್ಥಳೀಯ ಪೊಲೀಸರು ತನಿಖೆಗೆ ಸಹಕಾರ ನೀಡಬೇಕು. ಆದರೆ ನಮ್ಮ ಮನವಿಯನ್ನು ಪೊಲೀಸರು ನಿರಾಕರಿಸಿದ ಹಿನ್ನೆಲೆಯಲ್ಲಿ ಸಿಆರ್‌ಪಿಎಫ್‌  ಪಡೆಗಳನ್ನು ಭದ್ರತೆಗೆ ಕರೆಸಿಕೊಂಡಿದ್ದೇವೆ ಎಂದು ಸಿಬಿಐ ನಿರ್ದೇಶಕ ನಾಗೇಶ್ವರ ರಾವ್ ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *