ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಣೆ ಮಾಡಿದ ಸ್ಪೀಕರ್​ಗೆ ಅಭಿನಂದನೆ – ಸಿದ್ದರಾಮಯ್ಯ

ಬೆಂಗಳೂರು: 14 ತಿಂಗಳು ಮೈತ್ರಿ ಸರ್ಕಾರದಲ್ಲಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ ರಮೇಶ್ ಕುಮಾರ್ ಇಂದು ತನ್ನ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಣೆ ಮಾಡಿದ ಸ್ವೀಕರ್ ಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

ಇಂದು ಸದನದಲ್ಲಿ ಬಿ.ಎಸ್ ಯಡಿಯೂರಪ್ಪ ಅವರು ವಿಶ್ವಾಸಮತಯಾಚನೆ ಮಾಡಿದ ಬಳಿಕ ಸ್ಪೀಕರ್ ರಮೇಶ್ ಕುಮಾರ್ ಅವರು ತಮ್ಮ ಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ಸಮಯದಲ್ಲಿ ಅವರು ತಮ್ಮ ಕಾರ್ಯನಿರ್ವಹಣೆಯಲ್ಲಿ ತೋರಿದ ನಿಷ್ಠೆ, ನಿಷ್ಪಕ್ಷಪಾತತನವನ್ನು ಸಿದ್ದರಾಮಯ್ಯ ನೆನಪಿಸಿಕೊಂಡು ಟ್ವೀಟ್ ಮಾಡಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಸಿದ್ದು, ಕೆ.ಆರ್ ರಮೇಶ್ ಕುಮಾರ್ ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ್ದಾರೆ. ಅವರು ತೆಗೆದುಕೊಂಡ ಪ್ರಾಮಾಣಿಕ ನಿರ್ಧಾರಗಳು ದೇಶದಲ್ಲಿ ಓರ್ವ ಸ್ಪೀಕರ್ ಆಗಿದ್ದವರು ಹೇಗೆ ವರ್ತಿಸಬೇಕು ಎಂಬುದನ್ನು ತೋರಿಸಿದ್ದಾರೆ. ಸ್ಪೀಕರ್ ಆಗಿ ನಿಮ್ಮ ಸೇವೆಗೆ ನನ್ನ ಪ್ರಾಮಾಣಿಕ ಧನ್ಯವಾದಗಳು ಎಂದು ಹೇಳಿದ್ದಾರೆ.

ತಮ್ಮ ಫೇಸ್ ಬುಕ್ ಖಾತೆಯಲ್ಲೂ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ರಮೇಶ್ ಕುಮಾರ್ ಅವರು ಸಭಾಧ್ಯಕ್ಷರಾಗಿ ಕಾರ್ಯನಿರ್ವಹಣೆಯಲ್ಲಿ ತೋರಿದ ನಿಷ್ಠೆ, ನಿಷ್ಪಕ್ಷಪಾತತನ ಮತ್ತು ಸಂವಿಧಾನ, ಪ್ರಜಾಪ್ರಭುತ್ವದ ಕಡೆಗೆ ಅವರು ತೋರಿದ ಬದ್ಧತೆ ಅನುಕರಣೀಯವಾದುದು. ರಾಜಕೀಯ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಸಂವಿಧಾನದ ಆಶಯಗಳಿಗೆ ಚ್ಯುತಿ ಬಾರದಂತೆ ಅವರು ಕರ್ತವ್ಯ ನಿರ್ವಹಿಸಿದ ರೀತಿ ಪ್ರಶಂಸನೀಯ. ಅವರಿಗೆ ನಮ್ಮ ಪಕ್ಷದ ಪರವಾದ ಹಾಗೂ ನನ್ನ ವೈಯಕ್ತಿಕ ಅಭಿನಂದನೆಗಳು ಮತ್ತು ಧನ್ಯವಾದಗಳು ಎಂದು ಹೇಳಿದರು.

Comments

Leave a Reply

Your email address will not be published. Required fields are marked *