ಕರಾವಳಿ, ಮಲೆನಾಡು ಭಾಗಗಳಲ್ಲಿ ಇಂದು ರಾತ್ರಿ ಭಾರೀ ಮಳೆ ಸಾಧ್ಯತೆ- ಶ್ರೀನಿವಾಸ್ ರೆಡ್ಡಿ

ಬೆಂಗಳೂರು: ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಇಂದು ರಾತ್ರಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(ಕೆಎಸ್‍ಎನ್‍ಡಿಎಂಸಿ)ದ ನಿರ್ದೇಶಕ ಡಾ.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ರಾತ್ರಿ ಭಾರೀ ಮಳೆಯಾಗುವ ಮನ್ಸೂಚನೆ ಇದೆ. ಕಳೆದ 60 ವರ್ಷಗಳಿಗೆ ಹೋಲಿಸಿದರೆ, ರಾಜ್ಯದಲ್ಲಿ ಪ್ರಸ್ತುತ ಬರುತ್ತಿರುವುದು ಅತ್ಯಧಿಕ ಮಳೆಯಾಗಿದೆ. ಬೆಳಗಾವಿಯಲ್ಲಿ ವಾಡಿಕೆಗಿಂತ ಶೇ.65ರಷ್ಟು ಹೆಚ್ಚು ಮಳೆಯಾಗಿದೆ. ಕಳೆದ 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಹಾವೇರಿ ಜಿಲ್ಲೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ತಿಳಿಸಿದರು.

ಮಲೆನಾಡು ಭಾಗದ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಹಲವೆಡೆ ಹೆಚ್ಚು ಮಳೆಯಾಗಿದೆ. ಆದರೆ, ನಾಳೆಯಿಂದ ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲ ಕಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಈಗಾಗಲೇ ಮಳೆಯ ಪ್ರಮಾಣ ಕಡಿಮೆಯಾಗುತ್ತಾ ಬರುತ್ತಿದೆ. ಆದರೆ, ರಾಜ್ಯದಲ್ಲಾಗುತ್ತಿರುವ ಮಳೆ ಕೇರಳದ ಕಡೆ ತಿರುಗಿಕೊಂಡಿದ್ದು, ಮುಂದಿನ ದಿನಗಳಲ್ಲಿ ಕೇರಳ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದಾಗಿ ಮಾಹಿತಿ ನೀಡಿದರು.

ಜೂನ್, ಜುಲೈ ತಿಂಗಳ ಅಂತ್ಯಕ್ಕೆ ರಾಜ್ಯದಲ್ಲಿ ಶೇ.18 ರಷ್ಟು ಮಳೆ ಕೊರತೆ ಉಂಟಾಗಿತ್ತು. ಆದರೆ, ಕಳೆದ 10 ದಿನಗಳಲ್ಲಿ ಸುರಿದ ಮಳೆಯಿಂದಾಗಿ ವಾಡಿಕೆಗಿಂತ ಶೇ.13 ರಷ್ಟು ಹೆಚ್ಚು ಮಳೆಯಾಗಿದೆ. ಆಗಸ್ಟ್ ತಿಂಗಳಲ್ಲಿ ಮಳೆಯ ಪ್ರಮಾಣ ನೋಡಿದಲ್ಲಿ ರಾಜ್ಯದ 24 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಿದೆ. ಆದರೆ, ರಾಜ್ಯದಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುತ್ತಿದ್ದರೂ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ವಾಡಿಕೆಯ ಮಳೆಯೂ ಆಗಿಲ್ಲ ಎಂದು ತಿಳಿಸಿದರು.

ಕೇರಳಕ್ಕೆ ಮಳೆ ತಿರುಗುವುದರಿಂದ ಬೆಂಗಳೂರಿಗೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ. ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ. ಒಂದು ವೇಳೆ ಬಂದರೂ ಚದುರಿದ ಮಳೆಯಾಗಲಿದೆ ಎಂದು ಅವರು ವಿವರಿಸಿದರು.

Comments

Leave a Reply

Your email address will not be published. Required fields are marked *