ಮದ್ಯ ಕುಡಿದು ಕೊಂದವರಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಿ: ಸಿಟಿ ರವಿಗೆ ಸಿದ್ದರಾಮಯ್ಯ ತಿರುಗೇಟು

– ಮಾನಸಿಕ ಅಸ್ವಸ್ಥ ಟ್ವೀಟ್‍ಗೆ ವಿಪಕ್ಷ ನಾಯಕ ಗರಂ

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ವಿ.ಡಿ.ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ವಿಚಾರವಾಗಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಧ್ಯೆ ಟ್ವೀಟ್ ವಾರ್ ನಡೆದಿದೆ.

ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿ, ಮಹಾತ್ಮ ಗಾಂಧೀಜಿ ಅವರ ಹತ್ಯೆಗೆ ಸ್ಕೆಚ್ ಹಾಕಿದ್ದವರಲ್ಲಿ ಸಾವರ್ಕರ್ ಕೂಡ ಒಬ್ಬರು ಎಂದು ಹೇಳುತ್ತೀರಿ. ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ನೀವು ಮಾನಸಿಕ ಅಸ್ವಸ್ಥರಾಗಿದ್ದೀರಿ. ಇತಿಹಾಸದ ಬಗ್ಗೆ ನಿಮಗೆ ಅರಿವಿದೆಯಾ? ನೀವ್ಯಾಕೆ ಸೆಲ್ಯೂಲರ್ ಜೈಲಿಗೆ ಹೋಗಬಾರದು. ನಾನೇ ಸ್ಪಾನ್ಸರ್ ಮಾಡುತ್ತೇನೆ ಎಂದು ಗುಡುಗಿದ್ದಾರೆ.

ಸಚಿವರ ಹೇಳಿಕೆಯಿಂದ ಗರಂ ಆದ ಸಿದ್ದರಾಮಯ್ಯ ಅವರು, ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸುತ್ತಾರೆ. ನಮ್ಮಂತಹವರು ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಇತಿಹಾಸ ಓದಿ, ಸತ್ಯ ತಿಳಿದುಕೊಂಡು ಮಾತಾಡುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‍ನಲ್ಲಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರ ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ ಎಂದು ಕುಟುಕಿದ್ದಾರೆ.

ಮಂಗಳೂರಿನಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ಗಾಂಧೀಜಿ ಹತ್ಯೆಗೆ ಸ್ಕೆಚ್ ಹಾಕಿದ್ದ ಸಾವರ್ಕರ್ ಗೆ ಬಿಜೆಪಿ ಭಾರತ ರತ್ನ ನೀಡಲು ಮುಂದಾಗುತ್ತಿದೆ. ಗೋಡ್ಸೆಯ ಹಿಂದೆ ನಿಂತು ಹತ್ಯೆಗೆ ಸಂಚು ರೂಪಿಸಿದ್ದರು. ಸೂಕ್ತ ಸಾಕ್ಷ್ಯ ಇಲ್ಲದೆ ಆರೋಪಿಯಾಗಿ ಗುರುತಿಸಿರಲಿಲ್ಲ ಅಷ್ಟೇ. ಆದರೆ ಅಂಥ ವ್ಯಕ್ತಿಗೆ ಭಾರತ ರತ್ನ ಕೊಡಲು ಬಿಜೆಪಿ ಮುಂದಾಗಿದೆ. ಗೋಡ್ಸೆಗೂ ಭಾರತ ರತ್ನ ನೀಡಲಿ ಎಂದು ಟೀಕಿಸಿದ್ದರು.

Comments

Leave a Reply

Your email address will not be published. Required fields are marked *