ಕರ್ನಾಟಕದಲ್ಲೂ EWS ಕೋಟಾ ಜಾರಿ?

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದ ಜನರಿಗೆ ಶೇ.10 ರಷ್ಟು ಮೀಸಲಾತಿ ಕೊಟ್ಟು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಹೊಸ ಇತಿಹಾಸ ಸೃಷ್ಟಿ ಮಾಡಿದ್ದು ಎಲ್ಲರಿಗೂ ಗೊತ್ತಿರೋ ವಿಚಾರ. ಪರಿಶಿಷ್ಟ ಜಾತಿ-ಪಂಗಡ, ಹಿಂದುಳಿದ ವರ್ಗದ ಜನರಂತೆ ಸಾಮಾನ್ಯ ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ಮೀಸಲಾತಿ ಕೊಡುವುದೇ ಈ ಕಾಯ್ದೆಯ ಉದ್ದೇಶವಾಗಿದೆ.

ಕೇಂದ್ರ ಸರ್ಕಾರದ ಶಿಕ್ಷಣ, ಉದ್ಯೋಗ, ಇನ್ನಿತರ ಕ್ಷೇತ್ರದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ರಷ್ಟು ಮೀಸಲಾತಿ ಈಗಾಗಲೇ ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರೋ ಈ ಮಹತ್ವದ ಕಾಯ್ದೆ ಕರ್ನಾಟಕ ರಾಜ್ಯದಲ್ಲೂ ಜಾರಿಗೆ ಬರುವುದಕ್ಕೆ ಕಾಲ ಸನ್ನಿಹಿತವಾಗಿದೆ.

ಹೌದು. ಆರ್ಥಿಕವಾಗಿ ಹಿಂದುಳಿದ ವರ್ಗವು (ಇಡಬ್ಲ್ಯೂಎಸ್)ಕೋಟಾ ರಾಜ್ಯದಲ್ಲೂ ಜಾರಿಗೆ ತನ್ನಿ ಅಂತ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಮತ್ತು ಕಾರ್ಮಿಕ ಸಚಿವ ಸುರೇಶ್ ಕುಮಾರ್ ಮುಖ್ಯಮಂತ್ರಿ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ. ಸಾಮಾನ್ಯ ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ಈ ಕಾಯ್ದೆಯಿಂದ ಅನುಕೂಲವಾಗಲಿದೆ. ಹೀಗಾಗಿ ಈ ಕಾಯ್ದೆಯನ್ನ ರಾಜ್ಯದಲ್ಲೂ ಜಾರಿಗೆ ತರಬೇಕು ಅಂತ ಸಿಎಂಗೆ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ. ಮುಂಬರುವ ಅಧಿವೇಶನದಲ್ಲಿ ಕಾಯ್ದೆ ಜಾರಿಗೆ ಸಂಬಂಧ ಮಸೂದೆ ಮಂಡಿಸಬೇಕು ಅಂತ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರೋದರಿಂದ ರಾಜ್ಯದಲ್ಲೂ ಕಾಯ್ದೆ ಜಾರಿಯಾಗೋ ಲಕ್ಷಣ ಇದೆ. ಎಲ್ಲಾ ಅಂದುಕೊಂಡಂತೆ ನಡೆದರೆ ಮುಂದಿನ ಅಧಿವೇಶನಲ್ಲಿ ಮಸೂದೆ ಮಂಡನೆ ಆದರೂ ಅಚ್ಚರಿಯಿಲ್ಲ. ಒಂದು ವೇಳೆ ಕಾಯ್ದೆ ರಾಜ್ಯದಲ್ಲಿ ಜಾರಿಯಾದರೆ ರಾಜ್ಯದಲ್ಲೂ ಸಾಮಾನ್ಯ ವರ್ಗದ ಆರ್ಥಿಕವಾಗಿ ಹಿಂದುಳಿದ ಜನರಿಗೂ ಅನುಕೂಲವಾಗಲಿದೆ.

Comments

Leave a Reply

Your email address will not be published. Required fields are marked *