ಹುಬ್ಬಳ್ಳಿ: ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲಾ ಅರ್ಹ ಶಾಸಕರಿಗೂ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ. ಆದರೆ ಹೊಸಕೋಟೆ ಉಪಚುನಾವಣೆಯಲ್ಲಿ ಸೋಲು ಅನುಭವಿಸಿರುವ ಮಾಜಿ ಸಚಿವ ಎಂಟಿಬಿ ನಾಗರಾಜ್ ಕೂಡ ಸಚಿವರಾಗುತ್ತಾರೆ ಎಂದು ಶಾಸಕ ಬಿಸಿ ಪಾಟೀಲ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪರ ಬಿಜೆಪಿ ನಡೆಸುತ್ತಿರುವ ಪ್ರಮುಖರ ಅಭಿಯಾನದಲ್ಲಿ ಪಾಲ್ಗೊಂಡಿದ್ದ ಬಿಸಿ ಪಾಟೀಲ್, ನಾವು ಸಚಿವರಾಗೋದು ಖಚಿತ ಎಂದು ಭರವಸೆ ವ್ಯಕ್ತಪಡಿಸಿದರು.

ಎಂಟಿಬಿ ನಾಗರಾಜ್ ಅವರನ್ನು ಸಚಿವರನ್ನಾಗಿ ಮಾಡುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಜನವರಿ ಮೊದಲ ವಾರದಲ್ಲಿ ಸಿಎಂ, ಅಮಿತ್ ಶಾ ಜೊತೆ ಚರ್ಚೆ ನಡೆಸಲಿದ್ದಾರೆ. ಸಂಕ್ರಾತಿ ಬಳಿಕ ನಡೆಯುವ ಸಂಪುಟ ವಿಸ್ತರಣೆಯಲ್ಲಿ ನಮ್ಮ ಜೊತೆ ಎಂಟಿಬಿ ನಾಗರಾಜ್ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆಂದು ಬಿಸಿ ಪಾಟೀಲ್ ಹೇಳಿದ್ದಾರೆ. ಅಲ್ಲದೇ ನಾವೂ ಯಾರು ಇಂತಹದ್ದೇ ಸಂಪುಟ ಖಾತೆಗಳು ಬೇಕು ಎಂದು ಪಟ್ಟುಹಿಡಿದಿಲ್ಲ. ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ನಂತರ ಖಾತೆಗಳ ಬಗ್ಗೆ ನಿರ್ಧಾರ ಮಾಡಲಿದ್ದೇವೆ ಎಂದರು.
ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಶಾಸಕರು ಮಾತ್ರ ಸಚಿವರಾಗುತ್ತಾರೆ. ಸೋಲುಂಡವರಿಗೆ ಸಚಿವ ಸ್ಥಾನ ಸಿಗಲ್ಲವೆಂದು ಬಿಜೆಪಿ ನಾಯಕರಾದ ಆರ್.ಅಶೋಕ್ ಹಾಗೂ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದರು. ಆದರೆ ಇದೀಗ ಎಂಟಿಬಿ ನಾಗರಾಜ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.


Leave a Reply