ಹಾವೇರಿ ಜಿಲ್ಲೆಯ ಹಲಗೇರಿಯಲ್ಲಿ ಪಾಪು ಅಂತ್ಯಕ್ರಿಯೆ

ಹುಬ್ಬಳ್ಳಿ/ಧಾರವಾಡ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ನಾಡೋಜ ಪಾಟೀಲ ಪುಟ್ಟಪ್ಪ ಅವರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮಾರ್ಚ್ 16 ರಾತ್ರಿ 10 ಗಂಟೆ 10 ನಿಮಿಷಕ್ಕೆ ನಿಧನರಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಲಗೇರಿಯಲ್ಲಿ ಇಂದು ಅಂತ್ಯಕ್ರಿಯೆ ಜರುಗಲಿದೆ.

ಕಡಿಮೆ ರಕ್ತದೊತ್ತಡ , ರಕ್ತಹೀನತೆ, ಬ್ರೇನ್ ಹೆಮರೈಜ್, ಶ್ವಾಸಕೋಶದ ಸೋಂಕು ಸೇರಿದಂತೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಪಾಟೀಲ ಪುಟ್ಟಪ್ಪ ಅವರಿಗೆ ಕಿಮ್ಸ್ ನಲ್ಲಿ ಒಂದು ತಿಂಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಶಸ್ತ್ರಚಿಕಿತ್ಸೆ ನಂತರ ಚೇತರಿಸಿಕೊಂಡಿದ್ದ ಅವರಿಗೆ ಶ್ವಾಸಕೋಶದ ಸೋಂಕು ತಗುಲಿತ್ತು. ಹಲವು ದಿನ ಚಿಕಿತ್ಸೆಯ ನಂತರ ಪಾಪು ಕೊನೆಯುಸಿರೆಳೆದರು ಎಂದು ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ.

ಹುಬ್ಬಳ್ಳಿ ಮನೆಯಲ್ಲಿ ಇಂದು ಬೆಳಗ್ಗೆ 9 ರಿಂದ 12 ವರಗೆ ಸಾರ್ವಜನಿಕರ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇಡಲಾಗುವುದು. ಮಧ್ಯಾಹ್ನ 12 ಗಂಟೆಯಿಂದ ಅರ್ಧಗಂಟೆ ಕಾಲ ಧಾರವಾಡ ಕರ್ನಾಟಕದ ವಿದ್ಯಾವರ್ಧಕ ಸಂಘದಲ್ಲಿ ಜನರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ನಂತರ ಹಾವೇರಿಯ ರಾಣೇಬೆನ್ನೂರು ತಾಲೂಕಿನ ಸ್ವಗ್ರಾಮ ಹಲಗೇರಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಪಾಟೀಲ ಪುಟ್ಟಪ್ಪ ಅವರ ಪುತ್ರ ಅಶೋಕ್ ಪಾಟೀಲ ಮಾಹಿತಿ ನೀಡಿದ್ದಾರೆ.

ಜೋಶಿ ಸಂತಾಪ: ಕನ್ನಡಿಗರೆಲ್ಲರಿಗೆ ‘ಪಾಪು’ ಎಂದೇ ಗುರ್ತಿಸಲ್ಪಡುವ ಇವರು ಕನ್ನಡ ಪರ ಹೋರಾಟಗಳು, ಕಾಳಜಿಗಳಿಂದ ಜನಮಾನಸದಲ್ಲಿ ನೆಲೆಯಾದವರು. ಇವರ ಕನ್ನಡದ ಬಗೆಗಿನ ಮಗುವಿನಂತಹಾ ಪ್ರೀತಿ ಕನ್ನಡದ ಕುರಿತ ಐತಿಹಾಸಿಕ ಮತ್ತು ಸಾಂಸ್ಕೃತಿಕ ಒಳನೋಟ, ಅಪಾರವಾದ ಪಾಂಡಿತ್ಯ ಎಲ್ಲವೂ ಶ್ರೇಷ್ಠಮಟ್ಟದ್ದೆನ್ನುವುದರಲ್ಲಿ ಅನುಮಾನವಿಲ್ಲ ಎಂದು ಜೋಶಿ ಬಣ್ಣಿಸಿ ಇವರ ನಿಧಾನ ನಿಜಕ್ಕೂ ಶೋಚನೀಯ. ರಾಜ್ಯ ಸಭೆಯ ಸದಸ್ಯ, ಕನ್ನಡ ಕಾವಲು ಮತ್ತು ಗಡಿಸಲಹಾ ಸಮಿತಿ ಸಂಸ್ಥಾಪನ ಅಧ್ಯಕ್ಷ, ಕರ್ನಾಟಕ ಏಕೀಕರಣ, ಗೋಕಾಕ್ ಚಳುವಳಿಗಳ ನೇತೃತ್ವ ವಹಿಸಿದ್ದ ಇವರ ನಿಧನ ನನಗೆ ತುಂಬಾ ನೋವುಂಟುಮಾಡಿದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *