ಬೆಂಗಳೂರು ಗಲಾಟೆ- ಶಿವಮೊಗ್ಗ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

-ಧಾರವಾಡ ಅತ್ಯಾಚಾರ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ನೀಡಿ

ಶಿವಮೊಗ್ಗ: ಇತ್ತೀಚಿಗೆ ಧಾರವಾಡ ಜಿಲ್ಲೆಯಲ್ಲಿ ನಡೆದ ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ನಡೆದಿರುವ ಅತ್ಯಾಚಾರ, ಹತ್ಯೆ ಪ್ರಕರಣ ಹಾಗೂ ಮಂಗಳವಾರ ರಾತ್ರಿ ಬೆಂಗಳೂರಿನ ಡಿ.ಜೆ. ಹಳ್ಳಿಯಲ್ಲಿ ನಡೆದಿರುವ ಘಟನೆಯನ್ನು ಖಂಡಿಸಿ, ಇಂದು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಧಾರವಾಡ ಜಿಲ್ಲೆಯ ಗ್ರಾಮದಲ್ಲಿ ಬಾಲಕಿಯೊಬ್ಬಳು ತನ್ನ ತಾಯಿಯ ಅನಾರೋಗ್ಯದ ಕಾರಣ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಮರಳುತ್ತಿದ್ದಳು. ಈ ವೇಳೆ ಬಾಲಕಿ ಮೇಲೆ ವಿಕೃತ ಕಾಮಿಯೊಬ್ಬ ಅತ್ಯಾಚಾರ ನಡೆಸಿದ್ದಾನೆ. ಈ ಘಟನೆಯಿಂದ ಮನನೊಂದ ಬಾಲಕಿ ಜು. 31 ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ದುಷ್ಕೃತ್ಯ ಎಸಗಿರುವ ಆರೋಪಿಯನ್ನು ಕೂಡಲೇ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು. ಈ ಮೂಲಕ ಮೃತ ಬಾಲಕಿ ಮತ್ತು ಅವಳ ಕುಟುಂಬಕ್ಕೆ ಸಾಮಾಜಿಕ ನ್ಯಾಯವನ್ನು ಒದಗಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

 

ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕಾವಲ್ ಭೈರಸಂದ್ರದಲ್ಲಿ ಸಾರ್ವಜನಿಕರ ಆಸ್ತಿ ಹಾಳು ಮಾಡಿರುವುದರ ವಿರುದ್ಧ ಕ್ರಮ ಕೈಗೊಂಡು ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಅವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಹ ಸಿಎಂ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ತಡ ರಾತ್ರಿಯಲ್ಲಿ ಕೆಲವು ಕಿಡಿಗೇಡಿಗಳು ಸಿಕ್ಕಸಿಕ್ಕ ಬೈಕ್ ಗಳಿಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದಾರೆ. ಜೊತೆಗೆ ಪೊಲೀಸ್ ಠಾಣೆಯನ್ನೇ ಧ್ವಂಸಗೊಳಿಸಿದ್ದಲ್ಲದೇ ಠಾಣೆ ಸಿಬ್ಬಂದಿಗಳ ಮೇಲೂ ಹಲ್ಲೆ ನಡೆಸಿದ್ದಾರೆ. ಮಾಧ್ಯಮಗಳ ಮೇಲೂ ಹಲ್ಲೆ ನಡೆಸಿ ಕ್ಯಾಮೆರಾಗಳನ್ನು ಒಡೆದು ಹಾಕಿದ್ದಾರೆ. ಈ ರೀತಿ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವ ಮೂಲಕ ಇಂತಹವರಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.

Comments

Leave a Reply

Your email address will not be published. Required fields are marked *