ನ್ಯಾಯಾಲಯದ ಐತಿಹಾಸಿಕ ತೀರ್ಪು ಸ್ವಾಗತಾರ್ಹ: ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಇಂದು ಬಾಬ್ರಿ ಮಸೀದಿ ದ್ವಂಸ ಪ್ರಕರಣದಲ್ಲಿ ಬಂದ ಐತಿಹಾಸಿಕ ತೀರ್ಪು ಸ್ವಾಗತಾರ್ಹ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಟವರು ಟ್ವೀಟ್ ಮಾಡಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಬೊಮ್ಮಾಯಿ, ಬಾಬ್ರಿ ಮಸೀದಿ ಪ್ರಕರಣದಲ್ಲಿ ನಮ್ಮ ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ, ಶ್ರೀ ಮುರಳಿ ಮನೋಹರ ಜೋಶಿ, ಉಮಾಭಾರತಿ ಹಾಗೂ ಇತರರ ಮೇಲೆ ಇದ್ದ ಪ್ರಕರಣಕ್ಕೆ ಇಂದು ಲಕ್ನೋದ ಸಿಬಿಐ ನ್ಯಾಯಾಲಯವು ತೀರ್ಪು ನೀಡಿರುವುದು ಸ್ವಾಗತಾರ್ಹ ಎಂದಿದ್ದಾರೆ.

ಜೊತೆಗೆ ಇನ್ನೊಂದು ಟ್ವೀಟ್ ಮಾಡಿದ್ದು, 28 ವರ್ಷಗಳ ನಂತರ ಅಡ್ವಾಣಿಯವರು ಅರೋಪ ಮುಕ್ತರಾಗಿದ್ದು ಮತ್ತು ಸುಪ್ರೀಂಕೋರ್ಟ್ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿರುವುದು ಐತಿಹಾಸಿಕ ತೀರ್ಪಾಗಿರುತ್ತದೆ. ಇದು ಭಾರತದ ಜನರ ಭಾವನೆಗಳಿಗೆ ಸ್ಪಂದಿಸಿದಂತಾಗಿದ್ದು, ಭಾರತದ ಎಲ್ಲ ನಾಗರಿಕರು ಈ ತೀರ್ಪನ್ನು ಒಪ್ಪಿಕೊಂಡು ಶಾಂತಿ ಸೌರ್ಹಾದತೆಯನ್ನು ಕಾಪಾಡಿಕೊಳ್ಳುವಂತೆ ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

ಇವರ ಜೊತೆಗೆ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರು ಟ್ವೀಟ್ ಮಾಡಿ, ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಪೂರ್ವನಿಯೋಜಿತ ಕೃತ್ಯ ಅಲ್ಲವೆಂದು ಲಖನೌ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದು, ಬಿಜೆಪಿ ಭೀಷ್ಮ ಶ್ರೀ ಲಾಲ್ ಕೃಷ್ಣ ಅಡ್ವಾಣಿ, ಹಿರಿಯ ನಾಯಕ ಶ್ರೀ ಮುರಳಿ ಮನೋಹರ್ ಜೋಶಿ ಸೇರಿದಂತೆ ಎಲ್ಲಾ 32 ಆರೋಪಿಗಳನ್ನು ಖುಲಾಸೆಗೊಳಿಸಿದೆ. ಸತ್ಯಮೇವ ಜಯತೆ ಎಂದು ತಿಳಿಸಿದ್ದಾರೆ.

1992 ಡಿಸೆಂಬರ್ 6ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ 351 ಸಾಕ್ಷಿಗಳನ್ನು ಹಾಗೂ 600 ದಾಖಲೆ ಪ್ರತಿಗಳನ್ನು ವಿಶೇಷ ನ್ಯಾಯಾಲಯಕ್ಕೆ ನೀಡಿದೆ. ಆರಂಭಿಕವಾಗಿ 48 ಮಂದಿಯನ್ನು ಆರೋಪಿಗಳೆಂದು ಸಿಬಿಐ ಚಾರ್ಜ್‍ಶೀಟ್ ಸಲ್ಲಿಸಿತ್ತು. ಆದರೆ ಮೂರು ದಶಕಗಳಿಂದ ವಿಚಾರಣೆ ನಡೆಯುತ್ತಿದ್ದ ಕಾರಣ 48 ಜನ ಆರೋಪಿಗಳ ಪೈಕಿ 16 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 32 ಆರೋಪಿಗಳ ವಿರುದ್ಧ ವಿಚಾರಣೆ ನಡೆಯುತ್ತಿತ್ತು. ಈಗ ಈ ಪ್ರಕರಣದಲ್ಲಿದ್ದ ಎಲ್ಲ ಆರೋಪಿಗಳು ಖುಲಾಸೆಯಾಗಿದ್ದಾರೆ.

Comments

Leave a Reply

Your email address will not be published. Required fields are marked *