ಶಿರಾ ಉಪಚುನಾವಣೆ – ಅಭ್ಯರ್ಥಿಯ ಹುಡುಕಾಟದಲ್ಲಿ ಜೆಡಿಎಸ್

– ಕಾರ್ಯಾಕರ್ತರ ಸಮಾವೇಶ

ತುಮಕೂರು: ಶಾಸಕ ದಿ. ಸತ್ಯನಾರಾಯಣ್ ನಿಧನದಿಂದ ತೆರವಾಗಿರುವ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗಿದೆ. ಈ ಬೆನ್ನಲ್ಲೇ ಶಿರಾದಲ್ಲಿ ಜೆಡಿಎಸ್ ಅಭ್ಯರ್ಥಿಯ ಹುಡುಕಾಟ ಶುರುವಾಗಿದೆ.

ಜೆಡಿಎಸ್ ತೆಕ್ಕೆಯಲ್ಲೇ ಇರುವ ಕ್ಷೇತ್ರವನ್ನು ಉಳಿಸಿಕೊಳ್ಳಲು ಜೆಡಿಎಸ್ ಇನ್ನಿಲ್ಲದ ಕಸರತ್ತು ಮುಂದುವರಿಸಿದೆ. ಶಿರಾ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಶಾಸಕ ಸತ್ಯನಾರಾಯಣ್ ಪುತ್ರ ಸತ್ಯಪ್ರಕಾಶ್, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆಯ ಪತಿ ಕಲ್ಕೆರೆ ರವಿ ಹಾಗೂ ಸತ್ಯನಾರಾಯಣ್ ಪತ್ನಿ ಅಮ್ಮಾಜಮ್ಮ ಸೇರಿದಂತೆ ಹಲವರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡರು ಕಾರ್ಯಕರ್ತರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದ್ದಾರೆ.

ಇಂದು ಶಿರಾ ನಗರದ ಜೆಡಿಎಸ್ ಕಚೇರಿ ಎದುರು ಕಾರ್ಯಕರ್ತರ ಸಮಾವೇಶ ನಡೆಸಿದ ಮುಖಂಡರು, ಸಮಾವೇಶದಲ್ಲಿ ಅಭ್ಯರ್ಥಿಗಳು ಯಾರಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ, ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಜಿಲ್ಲೆಯ ಹಾಲಿ ಮಾಜಿ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಸಕ ಸತ್ಯನಾರಾಯಣ್ ಪುತ್ರ ಸತ್ಯಪ್ರಕಾಶ್ ಹಾಗೂ ಕಲ್ಕರೆ ರವಿ ಅವರು ತಮ್ಮ ನಾಯಕರ ಮುಂದೆ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಎಲ್ಲಾವನ್ನು ಅವಲೋಕಿಸಿರುವ ಜೆಡಿಎಸ್ ಮುಖಂಡರು ಅಭ್ಯರ್ಥಿಯ ಹೆಸರನ್ನು ಶೀಘ್ರದಲ್ಲೇ ಘೋಷಿಸುವುದಾಗಿ ಹೇಳಿದ್ದಾರೆ. ಇತ್ತ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಬಿರುಸಿನ ಪ್ರಚಾರ ಶುರು ಮಾಡಿದ್ದಾರೆ. ಬಿಜೆಪಿ ಮುಖಂಡರು ಕ್ಷೇತ್ರದ ತುಂಬಾ ಓಡಾಟ ಮಾಡಿ ಬೂತ್ ಮಟ್ಟದ ಸಭೆ ನಡೆಸಿದ್ದಾರೆ.

ಇನ್ನೊಂದೆಡೆ  ಕಾಂಗ್ರೆಸ್ ತಮ್ಮ ಅಭ್ಯರ್ಥಿ ಹೆಸರನ್ನು ಫೈನಲ್ ಮಾಡಿದೆ. ಜೊತೆಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಪ್ರಭಾವಿ ಮುಖಂಡ ಕೆ.ಎನ್.ರಾಜಣ್ಣ ಅವರ ಮನವೊಲಿಕೆ ಮಾಡಿರುವ ಮುಖಂಡರು, ಜಯಚಂದ್ರ ಹಾಗೂ ಕೆ.ಎನ್.ರಾಜಣ್ಣ ನಡುವಿನ ಭಿನ್ನಾಭಿಪ್ರಾಯವನ್ನು ತೊಡೆದು ಹಾಕಿ ಪಕ್ಷವನ್ನು ಗಟ್ಟಿಗೊಳಿಸಿದ್ದಾರೆ. ಈ ಎರಡು ರಾಷ್ಟ್ರೀಯ ಪಕ್ಷಗಳಲ್ಲಿ ಭರ್ಜರಿ ಸಿದ್ಧತೆ ನಡೆಸಿರುವ ನಡುವೆ ಜೆಡಿಎಸ್ ಕೂಡ ಇಂದು ಕಾರ್ಯಕರ್ತರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದೆ.

Comments

Leave a Reply

Your email address will not be published. Required fields are marked *