ವಿದ್ಯಾರ್ಥಿನಿ ಕಣ್ಣೀರಿಗೆ ಮಿಡಿದ ಸಚಿವ- ಸರ್ಕಾರವೇ ಭರಿಸಲಿದೆ ಶಿಕ್ಷಕಿಯ ಚಿಕಿತ್ಸಾ ವೆಚ್ಚ

ಬೆಂಗಳೂರು: ಮೂಡಬಿದಿರೆ ತಾಲೂಕಿನ ಶಿರ್ತಾಡಿಯ ಶಿಕ್ಷಕಿ ಎನ್. ಪದ್ಮಾಕ್ಷಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ಹಾಗೂ ಅದರ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಶಿಕ್ಷಕ ದಂಪತಿಗೆ ಕೊರೊನಾ ಸೋಂಕು ತಗುಲಿದೆ ಎಂಬ ವರದಿಗಳನ್ನು ಗಮನಿಸಿದ ತಕ್ಷಣವೇ ಸಚಿವರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರೊಂದಿಗೆ ದೂರವಾಣಿಯಲ್ಲಿ ಚರ್ಚಿಸಿದ್ದಾರೆ. ಅಲ್ಲದೆ ಶಿಕ್ಷಕಿಗೆ ಉತ್ತಮ ಚಿಕಿತ್ಸೆ ನೀಡಲು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರದ ಸೂಚನೆಯಂತೆ ಶಿಕ್ಷಕಿ ಪದ್ಮಾಕ್ಷಿಯವರ ಪುತ್ರಿ ಐಶ್ವರ್ಯಳನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಂಪರ್ಕಿಸಿದ್ದಾರೆ. ತಮ್ಮ ತಾಯಿಯ ಚಿಕಿತ್ಸೆ ಕುರಿತು ಸರ್ಕಾರ ಪೂರ್ಣ ಕಾಳಜಿ ವಹಿಸಲಿದ್ದು, ಯಾವುದೇ ಆತಂಕ ಬೇಡ ಎಂದು ಸಾಂತ್ವನ ಹೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೂ ಸಹ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ, ಶಿಕ್ಷಕಿಯ ಚಿಕಿತ್ಸೆಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ದಯವಿಟ್ಟು ನನ್ನ ಅಮ್ಮನನ್ನ ಉಳಿಸಿಕೊಡಿ – ಶಿಕ್ಷಣ ಸಚಿವರಿಗೆ ವಿದ್ಯಾರ್ಥಿನಿ ಪತ್ರ

ಆಸ್ಪತ್ರೆ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿರುವ ದ.ಕ. ಜಿಲ್ಲಾಧಿಕಾರಿಯವರು ರೋಗಿಯ ಕಡೆಯಿಂದ ಯಾವುದೇ ರೀತಿಯ ಹಣ ಪಡೆಯದೇ ಚಿಕಿತ್ಸೆ ನೀಡಲು ಸೂಚಿಸಿದ್ದು, ಚಿಕಿತ್ಸಾ ಬಿಲ್ ಅನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆಂದು ಸಚಿವರು ಹೇಳಿದ್ದಾರೆ.

Comments

Leave a Reply

Your email address will not be published. Required fields are marked *