ಶಾಲಾ-ಕಾಲೇಜು ಪುನರಾರಂಭ – ಪೋಷಕರಿಗೆ ಸುಧಾಕರ್ ಕಿವಿಮಾತು

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಶಾಲಾ ಕಾಲೇಜುಗಳು ಆರಂಭವಾಗಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಟ್ವೀಟ್ ಮಾಡಿ ಪೋಷಕರಿಗೆ ಕಿವಿಮಾತು ಹೇಳಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕೊರೊನಾ ಸೋಂಕು ಹಿನ್ನೆಲೆ ಕಳೆದ 9 ತಿಂಗಳಿನಿಂದ ಮುಚ್ಚಲಾಗಿದ್ದ ಶಾಲಾ-ಕಾಲೇಜುಗಳನ್ನು ವರ್ಷದ ಆರಭದಿಂದ ಪುನಃ ತೆರೆಯಲಾಗಿದೆ. ಮಕ್ಕಳ ಆರೋಗ್ಯ ಮತ್ತು ಶೈಕ್ಷಣಿಕ ಪ್ರಗತಿ ಎರಡನ್ನೂ ಗಮನದಲ್ಲಿಟ್ಟುಕೊಂಡು ಸರ್ಕಾರ ಬಹಳ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಈ ನಿರ್ಧಾರ ಕೈಗೊಂಡಿದೆ. ಕೋವಿಡ್-19 ನಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷರಿಗೆ ಕೆಲವು ಗೊಂದಲ ಮತ್ತು ಆತಂಕಗಳಿರುತ್ತದೆ. ಆದ್ರೆ ಪೋಷಕರು ಆತಂಕ ಪಡುವ ಅಗತ್ಯವಿಲ್ಲ, ಯಾವುದೇ ಗೊಂದಲವಿಲ್ಲದೆ ಮಕ್ಕಳನ್ನು ಶಾಲೆಗೆ ಕಳುಹಿಸಿಕೊಡಿ ಎಂದು ಬರೆದುಕೊಂಡಿದ್ದಾರೆ.

ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಶಾಲೆಗೆ ಕಳುಹಿಸಿ. ಅದರಲ್ಲಿಯೂ ಗ್ರಾಮೀಣ ಭಾಗದ ಪೋಷಕರಲ್ಲಿ ನಾನು ಮನವಿ ಮಾಡುತ್ತೇನೆ, ಮಕ್ಕಳ ಆಗಮನಕ್ಕೆ ಅವರ ಶಾಲೆ ಕಾಯುತ್ತಿದೆ, ಶಿಕ್ಷಕರು ಮಕ್ಕಳನ್ನು ಸ್ವಾಗತಿಸಲು ಎದುರು ನೋಡುತ್ತಿದ್ದಾರೆ. ಸರ್ಕಾರ ಸದಾ ನಿಮ್ಮೊಂದಿಗಿದೆ. ಬನ್ನಿ, ಕೊರೊನಾ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ ಎಂದು ಹೇಳಿದ್ದಾರೆ.

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಂದರ್ಭದಲ್ಲೂ ಇದೇ ರೀತಿ ಕೊರೊನ ವೈರಸ್‍ನಿಂದ ಬಗೆಗೆ ಆತಂಕ ಸಹಜವಾಗಿತ್ತು. ಆದರೆ ಅತ್ಯಂತ ಯಶಸ್ವಿಯಾಗಿ ಪರೀಕ್ಷೆಯನ್ನು ನಡೆಸುವ ಮೂಲಕ ಸರ್ಕಾರ ತನ್ನ ಬದ್ಧತೆ ನಿರೂಪಿಸಿತ್ತು. ಈಗಲೂ ಸಹ ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’ ಎಂಬುದೇ ಸರ್ಕಾರದ ಧ್ಯೇಯ ಎಂದು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *