ರಾಹುಲ್‌ ಭೇಟಿಗಾಗಿ ಸಿದ್ದರಾಮಯ್ಯ ದಿಢೀರ್‌ ದೆಹಲಿಗೆ

ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ಹೋರಾಟ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಮಾಜಿ ಸಿಎಂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ದಿಢೀರ್‌ ದೆಹಲಿಗೆ ಭೇಟಿ ನೀಡಲಿದ್ದಾರೆ.

ಇಂದು ಬೆಳಗ್ಗೆ 9:30ಕ್ಕೆ ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ ಸಂಜೆ 4 ಗಂಟೆಗೆ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಇಂದು ದೆಹಲಿಯಲ್ಲೇ ಉಳಿಯಲಿರುವ ಸಿದ್ದರಾಮಯ್ಯ ನಾಳೆ ಬೆಂಗಳೂರಿಗೆ ಮರಳಲಿದ್ದಾರೆ.

ರಾಜ್ಯದಲ್ಲಿ ಮೀಸಲಾತಿಗಾಗಿ ಮೂರು ಪ್ರಬಲ ಸಮುದಾಯಗಳು ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಯಾವ ನಿರ್ಧಾರ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಇಬ್ಬರು ನಾಯಕರು ಚರ್ಚೆ ನಡೆಸುವ ಸಾಧ್ಯತೆಯಿದೆ.

ಇಲ್ಲಿಯವರೆಗೂ ಸಿದ್ದರಾಮಯ್ಯ ಕುರುಬ ಸಮುದಾಯದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಆದರೆ ಮೀಸಲಾತಿ ಹೋರಾಟದಲ್ಲಿ ಸಿದ್ದರಾಮಯ್ಯ ಅನುಪಸ್ಥಿತಿ ಎದ್ದು ಕಾಣುತ್ತಿದೆ. ಬೆಂಗಳೂರಿನಲ್ಲಿ ನಡೆದ ಸಮಾವೇಶದಲ್ಲೂ ಈಶ್ವರಪ್ಪ ಮತ್ತು ವಿಶ್ವನಾಥ್‌ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಕುರುಬ ಸಮುದಾಯದ ಮೀಸಲಾತಿ ಹೋರಾಟದ ಬಳಿಕ ಸಿದ್ದರಾಮಯ್ಯ ಹಿಂದ(ಹಿಂದುಳಿದ ಮತ್ತು ದಲಿತ) ಸಮಾವೇಶ ನಡೆಸಲು ಸಿದ್ಧತೆ ನಡೆಸಲು ಮುಂದಾಗುತ್ತಿದ್ದಾರೆ ಎಂಬ ಮಾತು ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಕುರುಬ ಸಂಘಗಳು ನಡೆಸುವ ಸಮಾವೇಶದಲ್ಲಿ ತನ್ನ ಪಾತ್ರ ಏನು ಎಂಬುದರ ಬಗ್ಗೆ ವಿವರಣೆ ನೀಡುವ ಸಾಧ್ಯತೆಯಿದೆ.

ಕೋವಿಡ್‌ ಕಾರಣದಿಂದ ಸಿದ್ದರಾಮಯ್ಯ ದೆಹಲಿಗೆ ತೆರಳಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿರಲಿಲ್ಲ. ಬುಧವಾರ ರಾಹುಲ್‌ ಗಾಂಧಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಪುತ್ರಿಯ ವಿವಾಹ ಆರತಕ್ಷತೆಯಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬರಲಿದ್ದಾರೆ. ರಾಹುಲ್‌ ಗಾಂಧಿ ರಾಜ್ಯಕ್ಕೆ ಬರುವ ಮೊದಲೇ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿರುವುದು ಕುತೂಹಲ ಮೂಡಿಸಿದೆ.

Comments

Leave a Reply

Your email address will not be published. Required fields are marked *