ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣ- ಪಿಎಸ್‍ಐ ಜಾಮೀನು ಅರ್ಜಿ ವಜಾ

ಚಿಕ್ಕಮಗಳೂರು: ವಿಚಾರಣೆಗೆಂದು ಕರೆತಂದಿದ್ದ ದಲಿತ ಯುವಕನಿಗೆ ಮೂತ್ರ ಕುಡಿಸಿದ್ದ ಆರೋಪ ಎದುರಿಸುತ್ತಿರುವ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್‍ಐ ಅರ್ಜುನ್ ಜಾಮೀನು ಅರ್ಜಿ ವಜಾಗೊಂಡಿದೆ.

ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆಯ ಸಬ್ ಇನ್‍ಸ್ಪೆಕ್ಟರ್ ಆಗಿದ್ದ ಅರ್ಜುನ್, ಮಹಿಳೆಗೆ ಕರೆ ಮಾಡಿದನೆಂದು ದಲಿತ ಯುವಕನನ್ನು ಕರೆತಂದಿದ್ದಾರೆ. ವಿಚಾರಣೆ ನಡೆಸುತ್ತಿರುವ ವೇಳೆ ಬಾಯಾರಿಕೆ ಎಂದಿದ್ದಕ್ಕೆ ಬೇರೆ ಆರೋಪಿಯ ಮೂತ್ರ ಕುಡಿಸಿದ್ದರು ಎಂದು ದಲಿತ ಯುವಕ ಪುನೀತ್ ಆರೋಪಿಸಿದ್ದರು. ಪ್ರಕರಣ ಸಂಬಂಧ ಪಿಎಸ್‍ಐ ಅರ್ಜುನ್ ವಿರುದ್ಧ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದರಿಂದ ಅವರನ್ನು ಸಸ್ಪೆಂಡ್ ಮಾಡಿ, ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿತ್ತು. ಇದನ್ನೂ ಓದಿ: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ – PSIಗೆ 14 ದಿನ ನ್ಯಾಯಾಂಗ ಬಂಧನ

ಅಮಾನತುಗೊಂಡಿದ್ದ ಅರ್ಜುನ್, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ವಜಾ ಆಗುತ್ತಿದ್ದಂತೆ ತನಿಖೆ ನಡೆಸುತ್ತಿದ್ದ ಸಿಐಡಿ ಪೊಲೀಸರ ತಂಡ, ಅರ್ಜುನ್‍ರನ್ನು ಬೆಂಗಳೂರಿನಲ್ಲಿ ಬಂಧಿಸಿತ್ತು. ಬಳಿಕ ಸಿಐಡಿ ಪೊಲೀಸರು, ಅರ್ಜುನ್‍ರನ್ನು ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಪಿಎಸ್‍ಐಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಪಿಎಸ್‍ಐ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ.

ಅರ್ಜುನ್ ಅವರು ಮಧ್ಯಂತರ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಅರ್ಜಿಯ ತೀರ್ಪನ್ನು ಮಂಗಳವಾರಕ್ಕೆ ಕಾಯ್ದಿರಿಸಿತ್ತು. ಮಂಗಳವಾರ ಅರ್ಜುನ್ ಅವರು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಜಾಮೀನು ಅರ್ಜಿ ವಿಚಾರಣೆ ವೇಳೆ ಸಂತ್ರಸ್ತ ಯುವಕ ಪುನೀತ್ ಪರವಾಗಿ ಸರ್ಕಾರಿ ಅಭಿಯೋಜಕಿ ಭಾವನಾ ಹಾಗೂ ಖಾಸಗಿ ವಕೀಲ ಪರಮೇಶ್ವರ್ ವಾದ ಮಂಡಿಸಿದ್ದರು. ಇದನ್ನೂ ಓದಿ: ಗ್ರಾನೈಟ್ ಉದ್ಯಮಿಯ ಮನೆಗೆ ಕನ್ನ – 3 ಕೆಜಿ ಚಿನ್ನ, 25 ಲಕ್ಷ ಹಣ ಕದ್ದ ಆರೋಪ

Comments

Leave a Reply

Your email address will not be published. Required fields are marked *