ತುಂಗಭದ್ರಾ ನದಿ ಪಾತ್ರದ ಜನರಿಗೆ ಅಧಿಕಾರಿಗಳಿಂದ ಪ್ರವಾಹದ ಎಚ್ಚರಿಕೆ

ಬಳ್ಳಾರಿ: ತುಂಗಭದ್ರಾ ನದಿ ಪಾತ್ರದ ಭಾಗದಲ್ಲಿ ವಾಸಿಸುತ್ತಿರುವ ಜನರಿಗೆ ಟಿಬಿ ಜಲಾಶಯದ ಅಧಿಕಾರಿಗಳು ಎಚ್ಚರಿಕೆಯನ್ನು ನೀಡಿದ್ದಾರೆ.

1,633 ಅಡಿ ಗರಿಷ್ಟ ಮಟ್ಟ ಇರುವ ತುಂಗಭದ್ರಾ ಜಲಾಶಯದಲ್ಲಿ ಈಗ 1,630.04 ಅಡಿ ನೀರು ಸಂಗ್ರಹಗೊಂಡಿದೆ. 64,825 ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದ್ದು 44,144 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತದೆ.

ಒಳ ಹರಿವಿನ ಪ್ರಮಾಣ ಹೆಚ್ಚಾಗುತ್ತಿರುವ ಕಾರಣ ಯಾವುದೇ ಸಮಯದಲ್ಲಿ 5 ರಿಂದ 50 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡುವ ಸಾಧ್ಯತೆಗಳಿವೆ. ಹೀಗಾಗಿ ಅಣೆಕಟ್ಟು ಕೆಳಭಾಗದ ನದಿ ಪಾತ್ರದಲ್ಲಿ ವಾಸಿಸುವ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಕ್ಯೂಸೆಕ್ ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು cubic foot per second ಹೃಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.

 

Comments

Leave a Reply

Your email address will not be published. Required fields are marked *