ಬೆಂಗಳೂರು: ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ವಿರುದ್ಧ ಮೈಸೂರಿನಲ್ಲಿ ಮತ್ತೊಂದು ದೂರು ದಾಖಲಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ ರಮ್ಯಾ ವಿರುದ್ಧ ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇತ್ತೀಚೆಗೆ ರಮ್ಯಾ ವಿರುದ್ಧ ಉತ್ತರ ಪ್ರದೇಶದಲ್ಲಿ ದೂರು ದಾಖಲಾಗಿತ್ತು. ಈ ಬೆನ್ನಲ್ಲೇ ಇದೀಗ ಮೈಸೂರಿನಲ್ಲಿ ಮತ್ತೊಂದು ದೂರು ದಾಖಲಾಗಿದೆ.
ರಮ್ಯಾ ತಮ್ಮ ಟ್ವೀಟ್‍ನಲ್ಲಿ ಮೋದಿ ಅವರ ಬಗ್ಗೆ ಅವಹೇಳನ ಮಾಡಿ ಧಾರ್ಮಿಕ ಭಾವನೆ ಕೆರಳಿಸಿದ್ದಾರೆ. ಅಲ್ಲದೇ ರಮ್ಯಾ ಸಂಸದೆಯಾಗಿ ಆಯ್ಕೆಯಾದ ನಂತರ ಈಗ ತಮ್ಮ ಕ್ಷೇತ್ರವನ್ನೂ ಬಿಟ್ಟು ಹೋಗಿದ್ದಾರೆ. ಹಾಗಾಗಿ ರಮ್ಯಾ ಅವರಿಗೆ ಮೋದಿ ಅವರನ್ನು ಟೀಕಿಸುವ ಯಾವುದೇ ಹಕ್ಕಿಲ್ಲ ಎಂದು ಮೈಸೂರಿನ ವಕೀಲ ಬಿ.ಆರ್ ದಿನೇಶ್ ಗೌಡ ದೂರು ನೀಡಿದ್ದಾರೆ.

ರಫೇಲ್ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಮಂಡ್ಯ ಮಾಜಿ ಸಂಸದೆ ರಮ್ಯಾ, ಪ್ರಧಾನಿ ಮೋದಿ ಅವರನ್ನು ಟೀಕಿಸಿ ಅಪೇಕ್ಷರ್ಹ ಫೋಟೋವನ್ನು ಟ್ವೀಟ್ ಮಾಡಿದ್ದಕ್ಕೆ ಉತ್ತರ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು. ಲಕ್ನೋ ಮೂಲ ವಕೀಲರಾದ ಸೈಯದ್ ರಿಜ್ವಾನ್ ಅಹ್ಮದ್ ಮಂಗಳವಾರ ಗೌಮತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದರು. ಸದ್ಯ ರಮ್ಯಾ ಅವರ ವಿರುದ್ಧ ಐಪಿಸಿ ಸೆಕ್ಷನ್ 67 (ಮಾಹಿತಿ ತಂತ್ರಜ್ಞಾನದ ಕಾಯ್ದೆ), 2008 ಮತ್ತು ಸೆಕ್ಷನ್ 124ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು.

ಏನಿದು ಪ್ರಕರಣ?
ರಫೇಲ್ ಒಪ್ಪಂದ ಕುರಿತು ರಮ್ಯಾ ಸೆಪ್ಟೆಂಬರ್ 24ರಂದು ಮೋದಿ ಅವರ ಮೇಣದ ಪ್ರತಿಮೆಯ ಫೋಟೋ ಟ್ವೀಟ್ ಮಾಡಿದ್ದರು. ಈ ಫೋಟೋದಲ್ಲಿ ಮೋದಿ ಸ್ವತಃ ತಮ್ಮ ಪ್ರತಿಮೆ ಮೇಲೆ ಕಳ್ಳ ಎಂದು ಬರೆಯುವಂತೆ ಚಿತ್ರಿಸಲಾಗಿದೆ. ಈ ಫೋಟೋಗೆ ಕಳ್ಳ ಪ್ರಧಾನಿ ಸುಮ್ಮನಿದ್ದಾರೆ (#ChorPMChupHai) ಎಂಬ ಹ್ಯಾಶ್ ಟ್ಯಾಗನ್ನು ರಮ್ಯಾ ಬಳಸಿ ಟ್ವೀಟ್ ಮಾಡಿದ್ದರು.
ರಮ್ಯಾ ಮಾಡಿದ ಟ್ವೀಟ್ ನಲ್ಲಿ ನರೇಂದ್ರ ಮೋದಿ ವಿರುದ್ಧ ದ್ವೇಷ ಕಾರುವ ಅಂಶವಿದೆ ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಿಜ್ವಾನ್ ಅಹ್ಮದ್ ದೂರು ನೀಡಿದ್ದರು.
#ChorPMChupHai pic.twitter.com/Bahu5gmHbn
— Ramya/Divya Spandana (@divyaspandana) September 24, 2018
ರಾಹುಲ್ ಆರೋಪವೇನು?:
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೂಡ ರಫೇಲ್ ಒಪ್ಪಂದ ಕುರಿತು ಮೋದಿ ಸರ್ಕಾರದ ವಿರುದ್ಧ ಅರೋಪಗಳ ಸುರಿಮಳೆ ಮಾಡಿದ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ 2012ರಲ್ಲಿ ಫ್ರಾನ್ಸ್’ನ ಡಸಾಲ್ಟ್ ಏವಿಯೇಶನ್ ಸಂಸ್ಥೆಯೊಂದಿಗೆ 126 ಮಧ್ಯಮ ಶ್ರೇಣಿಯ ಬಹುಮುಖಿ ಯುದ್ಧ ವಿಮಾನಗಳ (ಎಂಎಂಆರ್’ಸಿಎ-ಮೀಡಿಯಂ ಮಲ್ಟಿ ರೋಲ್ ಕಾಂಬಾಟ್ ಏರ್’ಕ್ರಾಫ್ಟ್) ಖರೀದಿಗೆ ಒಪ್ಪಂದ ಮಾಡಿಕೊಟ್ಟಿತ್ತು. ಮಾತುಕತೆಯ ನಿಯಮಗಳ ಪ್ರಕಾರ ಡಸಾಲ್ಟ್ ಏವಿಯೇಶನ್ ಸಂಸ್ಥೆಯು 18 ರಫೇಲ್ ಜೆಟ್‍ಗಳನ್ನು ಹಾರಾಡಲು ಸನ್ನದ್ಧವಾಗಿರುವ ಸ್ಥಿತಿಯಲ್ಲಿ ಭಾರತಕ್ಕೆ ಪೂರೈಸಬೇಕು ಹಾಗೂ ಭಾರತದ ಎಚ್‍ಎಎಲ್‍ನೊಂದಿಗೆ ಉಳಿದ 108 ಯುದ್ಧ ವಿಮಾನಗಳನ್ನು ಭಾರತದಲ್ಲಿಯೇ ತಯಾರಿಸಬೇಕೆನ್ನುವ ಷರತ್ತನ್ನು ಹಾಕಿತ್ತು ಎಂದು ರಾಹುಲ್ ಆರೋಪಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply