ಜೆಡಿಎಸ್‍ಗೆ ಬೆಂಬಲ ಸೂಚಿಸಿದ ಸಂಸದ ಅಸಾದುದ್ದೀನ್ ಓವೈಸಿ

ಬೆಂಗಳೂರು: ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆಸಿ.ಚಂದ್ರಶೇಖರ್ ರಾವ್ ಹಾಗೂ ಬಿಎಸ್‍ಪಿ ನಾಯಕಿ ಮಾಯಾವತಿ ಜೆಡಿಎಸ್‍ಗೆ ಬೆಂಬಲ ಸೂಚಿಸಿದ ಬೆನ್ನಲ್ಲೆ ಅಖಿಲ ಭಾರತ ಮಜ್ಲಿಸ್-ಇ-ಇಥೆಹಾದುಲ್ ಮುಸಲ್ಮಿನ್(ಎಐಎಂಐಎಂ) ಪಕ್ಷದ ನಾಯಕ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಬೆಂಬಲ ಸೂಚಿಸುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ ಜೆಡಿಎಸ್‍ಗೆ ಮತ್ತೊಂದು ಪ್ರಾದೇಶಿಕ ಪಕ್ಷದ ಬೆಂಬಲ ಸಿಕ್ಕಂತಾಗಿದೆ.

ದೇವೇಗೌಡರಿಗೆ ಸಾಥ್ ನೀಡುವುದಾಗಿ ನಾನು ಈಗಾಗಲೇ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿರುವೆ. ಈ ಬಾರಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು ಎಂದ ಅವರು, ಬಿಜೆಪಿಯನ್ನು ತಡೆಯುವ ಶಕ್ತಿ ಕಾಂಗ್ರೆಸ್‍ಗೆ ಇಲ್ಲ. ದೇಶದ ಹಾಗೂ ಕರ್ನಾಟಕ ರಾಜ್ಯದ ಹಿತಕ್ಕಾಗಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು ಎಂದು ಅವರು ಹೇಳಿದ್ದಾರೆ.

ರಾಷ್ಟ್ರ ಮಟ್ಟದಲ್ಲಿ ತೃತಿಯ ರಂಗ ಸ್ಥಾಪನೆ ಸಂಬಂಧ ತೆಲಂಗಾಣ ಮುಖ್ಯಮಂತ್ರಿ ಟಿಆರ್ ಎಸ್ ಪಕ್ಷದ ನಾಯಕ ಕೆಸಿ ಚಂದ್ರಶೇಖರ್ ರಾವ್(ಕೆಸಿಆರ್) ಕಳೆದ ಶುಕ್ರವಾರ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ನಗರದ ಪದ್ಮನಾಭ ನಗರದ ಎಚ್‍ಡಿಡಿ ನಿವಾಸಕ್ಕೆ ಆಗಮಿಸಿದ ಚಂದ್ರಶೇಖರ್ ರಾವ್ ಅವರು ಸುಮಾರು 2 ಗಂಟೆಕಾಲ ದೇವೇಗೌಡರ ಜೊತೆ ಮಾತುಕತೆ ನಡೆಸಿದ್ದರು. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ, ನಟ ಪ್ರಕಾಶ್ ರೈ, ಟಿಆರ್ ಎಸ್ ಪಕ್ಷದ ಸಂಸದರು, ಶಾಸಕರು ಚರ್ಚೆಯಲ್ಲಿ ಭಾಗಿಯಾಗಿದ್ದರು.

ಎಚ್‍ಡಿಡಿ ನಿವಾಸದಲ್ಲೇ ಮಧ್ಯಾಹ್ನದ ಭೋಜನ ಸೇವಿಸಿದ ಕೆಸಿಆರ್ ಕರ್ನಾಟಕ ವಿಧಾನಸಭಾ ಚನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸುವಂತೆ ಕರ್ನಾಟಕದಲ್ಲಿರುವ ಎಲ್ಲ ತೆಲುಗು ಭಾಷಿಕ ಮತದಾರರಿಗೆ ಮನವಿ ಮಾಡುವುದಾಗಿ ಘೋಷಿಸಿದ್ದರು. ಅಲ್ಲದೇ ಕುಮಾರಸ್ವಾಮಿ ಅವರು ಎಲ್ಲೆಲ್ಲಿ ನನ್ನ ಅಗತ್ಯ ಇದೆ ಎಂದು ಕರೆಯುತ್ತಾರೋ ಅಲ್ಲಿಗೆ ನಾನು ಪ್ರಚಾರಕ್ಕೆ ಬರುತ್ತೇನೆ ಎಂದು ತಿಳಿಸಿದ್ದರು.

Comments

Leave a Reply

Your email address will not be published. Required fields are marked *