ವಿಜಯಪುರದಲ್ಲಿ ನಿಷೇಧಾಜ್ಞೆ ಜಾರಿ – ತಾತ್ಕಾಲಿಕವಾಗಿ ರ‍್ಯಾಲಿ ಕೈಬಿಟ್ಟ ಯತ್ನಾಳ್

ವಿಜಯಪುರ: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿಜಯಪುರ ಜಿಲ್ಲೆಯಲ್ಲಿ ಭಾರೀ ಪರ ಹಾಗೂ ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿತ್ತು. ಹೀಗಾಗಿ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆ ಪೌರತ್ವ ತಿದ್ದುಪಡಿ ಕಾಯ್ದೆ ಪರ ರ‍್ಯಾಲಿ ನಡೆಸುವುದನ್ನು ತಾತ್ಕಾಲಿಕವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೈಬಿಟ್ಟಿದ್ದಾರೆ.

ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧವಾಗಿ ಕೆಲ ಸಂಘಟನೆಗಳು ಬೃಹತ್ ಪ್ರತಿಭಟನೆಯನ್ನು ನಡೆಸಿದ್ದರು. ಈ ಕಾಯ್ದೆಯ ಪರವಾಗಿ ನಗರದಲ್ಲಿ ಶಾಸಕ ಯತ್ನಾಳ್ ನೇತೃತ್ವದಲ್ಲಿ ಬೃಹತ್ ರ‍್ಯಾಲಿ ಕೂಡ ನಡೆಸಲು ನಿರ್ಧರಿಸಲಾಗಿತ್ತು. ಇನ್ನು ಇದರ ಬಗ್ಗೆ ಪೂರ್ವ ಭಾವಿ ಸಭೆ ಕೂಡ ನಡೆಸಲಾಗಿತ್ತು.

ಆದರೆ ಇಂದು ಬೆಳಗ್ಗೆ 6 ಗಂಟೆಯಿಂದ 21ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಇದರ ಹಿನ್ನೆಲೆ ಯತ್ನಾಳ್ ನಡೆಸಲು ಇಚ್ಛಿಸಿದ್ದ ಕಾಯ್ದೆ ಪರ ರ‍್ಯಾಲಿಯನ್ನ ತಾತ್ಕಾಲಿಕವಾಗಿ ಕೈ ಬಿಡಲಾಗಿದೆ.

ಎಂದಿನಂತೆ ಜಿಲ್ಲೆಯಾದ್ಯಂತ ಜನಜೀವನ ಮುಂದುವರಿದಿದ್ದು, ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

Comments

Leave a Reply

Your email address will not be published. Required fields are marked *