ಬೆಂಗಳೂರು: ಬೀದರ್‍ನ ಶಾಹೀನ್ ಶಾಲೆಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವುದನ್ನು ವಿರೋಧಿಸಿ ಇಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರಿನ ಆನಂದ್ ರಾವ್ ವೃತ್ತದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಯಲಿದೆ.
ಪ್ರತಿಭಟನಾಕಾರರು ಅಲ್ಲಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಸಿಎಂ ನಿವಾಸ ಧವಳಗಿರಿ ಮೇಲೆ ಮುತ್ತಿಗೆ ಹಾಕುವ ಯೋಜನೆಯನ್ನೂ ಹಾಕಿಕೊಂಡಿದ್ದಾರೆ. ಶಾಹೀನ್ ಶಾಲೆಯಲ್ಲಿ ವಿದ್ಯಾರ್ಥಿಗಳು ಸಿಎಎ ವಿರೋಧಿಸಿ ನಾಟಕ ಪ್ರದರ್ಶನ ಮಾಡಿದ್ದನ್ನೇ ಆಧರಿಸಿ ಬೀದರ್ ಪೊಲೀಸರು ಶಾಲೆ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ಹೀಗೆ ಪೊಲೀಸ್ ವ್ಯವಸ್ಥೆಯನ್ನು ರಾಜ್ಯ ಬಿಜೆಪಿ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕರು, ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ.

ಕಾಂಗ್ರೆಸ್ ನಾಯಕರಿಂದ ಸಿಎಂ ನಿವಾಸದ ಮೇಲೆ ಮುತ್ತಿಗೆ ಕಾರ್ಯಕ್ರಮ ಇರೋ ಹಿನ್ನೆಲೆಯಲ್ಲಿ ಸಿಎಂ ನಿವಾಸ ಧವಳಗಿರಿಗೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಕಾಂಗ್ರೆಸ್ ನಾಯಕರು ಸಿಎಂ ನಿವಾಸಕ್ಕೆ ಮುತ್ತಿಗೆ ಕಾರ್ಯಕ್ರಮ ಇಟ್ಟುಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಧವಳಗಿರಿಗೆ ಇಬ್ಬರು ಎಸಿಪಿಗಳ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಸಿಎಂ ನಿವಾಸ ಮತ್ತು ನಿವಾಸದ ಸುತ್ತಮುತ್ತ ಪೊಲೀಸ್ ಬಿಗಿ ಕಣ್ಗಾವಲು ಇರಿಸಲಾಗಿದೆ.
ಸಿಎಂ ಭೇಟಿಗೆ ಬಂದು ಹೋಗುವವರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ರೀತಿಯ ಬಿಗಿ ಭದ್ರತೆ ಕೈಗೊಂಡಿದ್ದಾರೆ.


Leave a Reply