ರಾಮೇಶ್ವರಂ ಕೆಫೆ ಸ್ಫೋಟ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡ್ತಿಲ್ಲ: ವಿಜಯೇಂದ್ರ

ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆ (Rameshwaram Cafe) ಸ್ಫೋಟ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿಲ್ಲ ಎಂದು ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಆರೋಪ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಮೇಶ್ವರಂ ಕೆಫೆ ಸ್ಫೋಟವಾದ ಬಳಿಕ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ನಾವು ಪ್ರೆಸ್‍ಮೀಟ್ ಮಾಡಿದ್ದೇವೆ. ಅದರಲ್ಲಿ ನಾವು ಈ ಕುರಿತು ರಾಜಕೀಯ ಮಾಡಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇವೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಸ್ಪಷ್ಟವಾಗಿ ತಿಳಿಸಿದ್ದೇವೆ ಎಂದರು.

ಸ್ಫೋಟಕ್ಕೆ ಸಂಬಂಧಿಸಿದಂತೆ ಸರ್ಕಾರದ ಮಂತ್ರಿಗಳ ಹೇಳಿಕೆಗಳನ್ನು ಗಮನಿಸಿದರೆ ಕೇವಲ ಬಿಜೆಪಿ ಮಾತ್ರವಲ್ಲ ಸಾಮಾನ್ಯ ಜನರಿಗೂ ಸರ್ಕಾರದ ಬಗ್ಗೆ ವಿಶ್ವಾಸ ಬರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಂಗಳೂರಿನ ಕುಕ್ಕರ್ ಬ್ಲಾಸ್ಟ್‌ಗು ಕೆಫೆಯಲ್ಲಿ ನಡೆದ ಸ್ಫೋಟಕ್ಕೂ ಸಾಮ್ಯತೆ ಇಲ್ಲ: ಸಿಎಂ

ನಡೆದಿದ್ದೇನು..?: ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ನಡೆದ ಭಾರೀ ಸ್ಫೋಟದಲ್ಲಿ ಕೆಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಫೋಟದ ಪರಿಣಾಮ ಸ್ಥಳದಲ್ಲಿ ದಟ್ಟವಾದ ಹೊಗೆ ಆವರಿಸಿಕೊಂಡಿತ್ತು. ಘಟನೆ ನಡೆಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಪ್ರಾಥಮಿಕ ಹಂತದಲ್ಲಿ ಸಿಲಿಂಡರ್ ಸ್ಫೋಟದಿಂದ ಘಟನೆ ನಡೆದಿದೆ ಎನ್ನಲಾಗಿತ್ತು. ಆದರೆ ಇದೀಗ ಬಾಂಬ್ ಬ್ಲಾಸ್ಟ್ ಆಗಿರುವುದು ಬಯಲಾಗಿದೆ.

ಪ್ರಕರಣ ಸಂಬಂಧ ಈಗಾಗಲೇ ಕೆಲವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಹಾಗೆಯೇ ಆರೋಪಿ ಪತ್ತೆಗೆ ಬಲೆ ಬೀಸಲಾಗಿದೆ. ಆರೋಪಿಗಾಗಿ ಕರ್ನಾಟಕದ ವಿವಿಧ ಭಾಗಗಳ ಜೊತೆಗೆ ಕೇರಳ ಹಾಗೂ ತಮಿಳುನಾಡಿನಲ್ಲಿಯೂ ಶೋಧ ಕಾರ್ಯ ನಡೆಸಲಾಗುತ್ತಿದೆ. ಇತ್ತ ಗಾಯಾಳುಗಳ ಬಟ್ಟೆಗಳನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಲಾಗಿದೆ. ಇದನ್ನೂ ಓದಿ: ಮಂಗಳೂರು ಬ್ಲಾಸ್ಟ್‌ಗೂ ರಾಮೇಶ್ವರಂ ಕೆಫೆ ಸ್ಪೋಟಕ್ಕೂ ಲಿಂಕ್ ಕಾಣ್ತಿದೆ: ಡಿಕೆಶಿ