ಟ್ರಕ್‍ಗೆ ಬಸ್ ಡಿಕ್ಕಿ- 8 ಮಂದಿ ದಾರುಣ ಸಾವು, 30 ಜನರಿಗೆ ಗಾಯ

ನವದೆಹಲಿ: ಡಬಲ್ ಡೆಕ್ಕರ್ ಬಸ್ಸೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ದಾರುಣವಾಗಿ ಮೃತಪಟ್ಟಿದ್ದು, 30 ಮಂದಿ ಗಾಯಗೊಂಡಿರುವ ಘಟನೆ ಗ್ರೇಟರ್ ನೊಯ್ಡಾದ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ.

ಈ ಘಟನೆ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ನಡೆದಿದೆ. ಬಸ್ ಆಗ್ರಾದಿಂದ ನೊಯ್ಡಾ ಕಡೆ ಚಲಿಸುತ್ತಿತ್ತು. ಈ ವೇಳೆ ಬ್ರೇಕ್ ಫೈಲ್ ಆಗಿ ಮುಂದೆ ಚಲಿಸುತ್ತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಕೈಲಾಶ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಗೆಯೇ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ರಭಸಕ್ಕೆ ಬಸ್‍ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆ ನಡೆದ ಕೂಡಲೇ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ರವಾನಿಸಿ, ಗಾಯಾಳುಗಳನ್ನು ರಕ್ಷಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಘಟನೆ ಬಗ್ಗೆ ಸುದ್ದಿಯಾಗುತ್ತಿದ್ದಂತೆಯೇ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದುಃಖ ವ್ಯಕ್ತಪಡಿಸಿದ್ದು, ಕೂಡಲೆ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಜಿಲ್ಲಾಡಳಿತ ಹಾಗೂ ಪೊಲೀಸರಿಗೆ ಸೂಚನೆ ನೀಡಿದ್ರು. ಹಾಗೆಯೇ ಘಟನೆ ನಡೆದ ಕೆಲವೇ ಹೊತ್ತಿನಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ರು ಎಂದು ಅಲ್ಲಿನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಟ್ವೀಟ್ ಮಾಡುವ ಮೂಲಕ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಮೃತ ಆತ್ಮಕ್ಕೆ ಶಾಂತಿ ದೊರಕಲಿ. ಹಾಗೆಯೇ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಬರೆದುಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *