ಕಾಲ್ತುಳಿತಕ್ಕೆ ಸಿಎಂ, ಡಿಸಿಎಂ, ಗೃಹ ಸಚಿವರೇ ಕಾರಣ – ಪೊಲೀಸರ ಮೇಲೆ ತಪ್ಪು ಹೊರಿಸಿ ನುಣುಚಿಕೊಳ್ಳುವ ಯತ್ನ: ವಿಜಯೇಂದ್ರ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆದ ಕಾಲ್ತುಳಿತಕ್ಕೆ (Chinnaswamy Stampede) ಸಿಎಂ, ಡಿಸಿಎಂ, ಗೃಹ ಸಚಿವರೇ ಕಾರಣ ಎಂದು ಎಂದು ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ದೂರಿದ್ದಾರೆ.

ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashoka), ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಜೆಡಿಎಸ್ ವಿರೋಧ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದಲ್ಲಿ ಇಂದು ಬೆಳಗ್ಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ವಿಜಯೇಂದ್ರ ಅವರು ಮಾತನಾಡಿದರು. ಇದನ್ನೂ ಓದಿ: ದಕ್ಷಿಣ ಭಾರತದಲ್ಲಿ ಅತಿಹೆಚ್ಚು ಬಿಪಿಎಲ್ ಕಾರ್ಡ್ ಇರೋದು ಕರ್ನಾಟಕದಲ್ಲೇ, ಮತ್ತೆ ಪರಿಷ್ಕರಣೆ ಮಾಡ್ತೀವಿ: ಸಚಿವ ಮುನಿಯಪ್ಪ

ಅಮಾಯಕ ಪೊಲೀಸರ ಮೇಲೆ ಕ್ರಮ ಏಕೆ?
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವ ಸಂಪುಟ ಮತ್ತು ಈ ಸರ್ಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆದ ಕಾಲ್ತುಳಿತ ಪ್ರಕರಣದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹಸಚಿವರು, ಸಚಿವರು ಜವಾಬ್ದಾರಿ ತೆಗೆದುಕೊಳ್ಳಬೇಕಿತ್ತು. ಅದನ್ನು ಬಿಟ್ಟು ಅಮಾಯಕ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಅಮಾನತು ಮಾಡಿದ್ದಾರೆ ಎಂದು ಟೀಕಿಸಿದರು. ಇವರ ಹುಳುಕು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡರು ಎಂದು ವಿಜಯೇಂದ್ರ ಆರೋಪಿಸಿದರು.

ರಸಗೊಬ್ಬರ ಕೊರತೆಯಿಂದ ರೈತರು ರಾಜ್ಯದಲ್ಲಿ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಪರಿಹಾರ ನೀಡುತ್ತಿಲ್ಲ. ಇದರ ಕುರಿತು ಚರ್ಚೆಯೂ ಆಗುತ್ತಿಲ್ಲ. ಈ ಎಲ್ಲ ವಿಷಯಗಳನ್ನು ಸದನದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಿದ್ದೇವೆ. ಸಾಂಕೇತಿಕವಾಗಿ ಎರಡೂ ಪಕ್ಷಗಳ ಶಾಸಕರು ಹೋರಾಟ ಮಾಡಿದ್ದೇವೆ ಎಂದು ವಿವರಿಸಿದರು. ಇದನ್ನೂ ಓದಿ: ಬಿಜೆಪಿಯಲ್ಲಿ ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ, ಕೇವಲ ಶಬ್ದ ಮಾತ್ರ ಮಾಡುತ್ತವೆ: ಡಿಕೆಶಿ

ಇವೆಲ್ಲ ವಿಷಯಗಳನ್ನು ಸದನದ ಒಳಗೆ ಪ್ರಸ್ತಾಪಿಸುತ್ತೇವೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಹೊಣೆಗೇಡಿ ಸರಕಾರ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸುತ್ತೇವೆ ಎಂದು ವಿಜಯೇಂದ್ರ ತಿಳಿಸಿದರು. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | SIT ಭೇಟಿಯಾದ ಪದ್ಮಲತಾ ಕುಟುಂಬ – 38 ವರ್ಷಗಳ ಹಳೆಯ ಕೇಸ್ ತನಿಖೆಗೆ ಒತ್ತಾಯ