34,863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ತುಂಬಲು ಸಿಎಂ ಸೂಚನೆ

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು (Government Posts) ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸೂಚನೆ ನೀಡಿದ್ದಾರೆ.

ಸಿಎಂ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿಂದು ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ (KDP Meeting) ನಡೆಸಿದರು. ಸಚಿವರಾದ ಜಿ.ಪರಮೇಶ್ವರ್‌, ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂರಾವ್, ಡಾ.ಶರಣ ಪ್ರಕಾಶ ಪಾಟೀಲ್, ಬೈರತಿ ಸುರೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಸೇರಿ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ (Government Department Posts) ಭರ್ತಿಗೆ ಸೂಚನೆ ನೀಡಲಾಯಿತು.

ಈ ವೇಳೆ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡಬೇಕು. 371ಜೆ ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್‌ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದರು. ಇದನ್ನೂ ಓದಿ: 2026ರ ವೇಳೆಗೆ ಸಂಪೂರ್ಣ ನಕ್ಸಲಿಸಂ ಮಟ್ಟ ಹಾಕಿದ್ದೇವೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳಬೇಕು: ಅಮಿತ್‌ ಶಾ

ಅಲ್ಲದೇ ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಬೇಕು. ಯುಪಿಎಸ್‌ಸಿಯಲ್ಲಿ ಕೇವಲ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ಹುದ್ದೆಗಳನ್ನು ಮಾಡಲು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಕೆಪಿಎಸ್‌ಸಿ ಕೇವಲ ಗ್ರೂಪ್‌ ಎ ಮತ್ತು ಬಿ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್‌ ಸಿ ಯಂತಹ ಬೇರೆ ನೇಮಕಾತಿಗಳನ್ನು ಕೆಇಎ ಮೂಲಕ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ. ಕೇರಳ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಕುರಿತು ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ತಾಕೀತು ಮಾಡಿದರು. ಇದನ್ನೂ ಓದಿ: 8ನೇ ಬಾರಿ ಆರೋಪಿ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮಿ- ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಕೊಳ್ಳಿ: ಪತಿಗೆ ಕಿವಿಮಾತು

ನೇಮಕಾತಿ ಕುರಿತಾಗಿ ವಾರ್ಷಿಕ ಕ್ಯಾಲೆಂಡರ್‌ ಸಿದ್ಧಪಡಿಸಲು ಇರುವ ತೊಡಕುಗಳನ್ನು ನಿವಾರಿಸಬೇಕು. ಆರ್ಥಿಕ ವರ್ಷದ ಆರಂಭದಲ್ಲಿ ಆಯಾ ಇಲಾಖೆಗಳು ನೇಮಕಾತಿಗೆ ಖಾಲಿಯಿರುವ ಹುದ್ದೆಗಳ ಕುರಿತು ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳುಹಿಸಬೇಕು. ಕಾಲಮಿತಿಯೊಳಗಾಗಿ ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದುಕೊಂಡು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಕುರಿತಾಗಿ ಏಕರೀತಿಯ ಕ್ಯಾಲೆಂಡರ್‌ ಸಿದ್ಧಪಡಿಸಬೇಕು. ಪಿಎಸ್‌ಐ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಮೊದಲು ನಡೆಸಲಾಗುತ್ತಿದ್ದು, ಅಬಕಾರಿ ಇಲಾಖೆ ನೇಮಕಾತಿಯಲ್ಲಿ ಲಿಖಿತ ಪರೀಕ್ಷೆಯನ್ನು ಮೊದಲು ಮಾಡಲಾಗುತ್ತದೆ. ಅಬಕಾರಿ ಇಲಾಖೆ ಮಾದರಿಯನ್ನು ಪಿಎಸ್‌ಐ ನೇಮಕಾತಿಯಲ್ಲೂ ಅನುಸರಿಸುವ ಕುರಿತು ಪರಿಶೀಲನೆ ನಡೆಸಬೇಕು ಎಂದು ಸಂಬಂಧಪಟ್ಟ ಇಲಾಖಾ ಸಚಿವರಿಗೆ ಸೂಚಿಸಿದರು.

ರಾಜ್ಯದಲ್ಲಿ 41 ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಯಾಗದ ಕಾರಣ ನೇಮಕಾತಿ ವಿಳಂಬವಾಗುತ್ತಿದೆ. ಕೆಲವು ಇಲಾಖೆಗಳಲ್ಲಿ ಹಲವು ದಶಕಗಳಿಂದ ಸಿ ಅಂಡ್‌ ಆರ್‌ ತಿದ್ದುಪಡಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಗೆ ಅನುಕೂಲವಾಗುವಂತೆ ಮಾದರಿ ಸಿ ಅಂಡ್‌ ಆರ್‌ ಸಿದ್ಧಪಡಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಕಾಂತರಾಜು ಸಮಿತಿ ವರದಿಗೆ ಆಗ್ರಹ – ಅ.18ರ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಸಿಎಂ