ಪ್ರತಿಭಟನೆ ನಡೆಸುತ್ತಿರೋ ಬಿಜೆಪಿಗೆ ಸಿಎಂ ಸವಾಲು

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕೈಗೊಂಡಿರುವ ಅಹೋರಾತ್ರಿ ಧರಣಿ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಇಂದು ಸಿಎಂ ಗೃಹ ಕಚೇರಿ ಕೃಷ್ಣಾ ಮೇಲೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಪ್ರತಿಭಟನೆ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ.

ಸಿಎಂ ಟ್ವೀಟ್ ಮಾಡುವ ಮೂಲಕ ಪ್ರತಿಭಟನೆಗೆ ಉತ್ತರಿಸಿದ್ದಾರೆ. “ಬಿಜೆಪಿ ನಾಯಕರ ‘ಅಹೋರಾತ್ರಿ’ ಪ್ರತಿಭಟನೆಯನ್ನು ಗಮನಿಸಿದ್ದೇನೆ. ಸಿಎಂ ಕಚೇರಿಗೆ ಮುತ್ತಿಗೆಯ ಅವಶ್ಯಕತೆಯಿಲ್ಲ. ಜಿಂದಾಲ್, ಬರ, ರೈತರ ಸಾಲಮನ್ನಾ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಚರ್ಚೆಗೆ ಸಿದ್ಧನಿದ್ದೇನೆ. ಪ್ರಧಾನಿ ಸೇರಿದಂತೆ ಕೇಂದ್ರದ ಸಚಿವರೊಂದಿಗೆ ಹಲವು ಸಮಸ್ಯೆ ಕುರಿತು ಚರ್ಚಿಸಿದ್ದೇನೆ. ನಿಮ್ಮ ಸಮಯ ತಿಳಿಸಿ ಚರ್ಚೆಗೆ ನಾನು ಸಿದ್ಧ” ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕೈಗೊಂಡಿರುವ ಅಹೋರಾತ್ರಿ ಧರಣಿ ಇವತ್ತು ಮೂರನೇ ದಿನಕ್ಕೆ ಕಾಲಿಟ್ಟಿದೆ. ಅಹೋರಾತ್ರಿ ಧರಣಿಯ ಕೊನೆಯ ದಿನವಾದ ಇಂದು ಬಿಜೆಪಿ ನಾಯಕರು ಸಿಎಂ ಗೃಹ ಕಚೇರಿ ಕೃಷ್ಣಾ ಮೇಲೆ ಮುತ್ತಿಗೆ ಹಾಕುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ. ಜಿಂದಾಲ್ ಸಂಸ್ಥೆಗೆ ಭಾರೀ ಪ್ರಮಾಣದಲ್ಲಿ ಜಮೀನು ಹಸ್ತಾಂತರಿಸುವ ನಿರ್ಧಾರ ವಾಪಸ್ ಪಡೆಯದ ಕಾರಣ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.

ಬೆಳಗ್ಗೆ 11 ಗಂಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕೃಷ್ಣಾ ಮುತ್ತಿಗೆ ಕಾರ್ಯಕ್ರಮ ನಡೆಯಲಿದೆ. ಕೃಷ್ಣಾ ಮುತ್ತಿಗೆ ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ಬಿಜೆಪಿ ಸಂಸದರು, ಶಾಸಕರು, ಪಕ್ಷದ ಪದಾಧಿಕಾರಿಗಳು, ಭಾಗವಹಿಸಲಿದ್ದಾರೆ. ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದ್ದಾರೆ.

Comments

Leave a Reply

Your email address will not be published. Required fields are marked *