Cyclone Montha| ಎರಡು ದಿನ ಬೆಂಗಳೂರು ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಮೊಂಥಾ ಚಂಡಮಾರುತದ (Cyclone Montha) ಪರಿಣಾಮ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ.

ಮಂಗಳವಾರ ಸಂಜೆ ಅಥವಾ ರಾತ್ರಿ ಆಂಧ್ರದ ಕರಾವಳಿ ಭಾಗಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದೆ. ಪರಿಣಾಮ ಎರಡು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ವಿಜ್ಞಾನಿ ಸಿಸಿ ಪಾಟೀಲ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಲಬುರಗಿ, ಕೊಪ್ಪಳ, ಬಾಗಲಕೋಟೆ, ಗದಗ, ಬೀದರ್, ಬೆಂಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಸೇರಿದಂತೆ ಅನೇಕ ಜಿಲ್ಲೆಗಳಿಗೆ ಎರಡು ದಿ‌ನ ಯಲ್ಲೋ ಅಲರ್ಟ್ (Yellow Alert) ಘೋಷಣೆಯಾಗಿದೆ. ಅಕ್ಟೋಬರ್ 30ರ ಬಳಿಕ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ.

ಅಕ್ಟೋಬರ್ 28 ಹಾಗೂ 29ರಂದು ಗಾಳಿಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಒಡಿಶಾದಲ್ಲಿ ಮೊಂಥಾ ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ. ಗಂಟೆಗೆ 80 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ದಕ್ಷಿಣ ಒಡಿಶಾದ ಎಂಟು ಜಿಲ್ಲೆಗಳಲ್ಲಿ 128 ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಲಾಗಿದೆ.