Darjeeling Flood | 24/7 ಕಂಟ್ರೋಲ್‌ ರೂಮ್‌ ಓಪನ್‌ – ನಾಳೆ ಡಾರ್ಜಿಲಿಂಗ್‌ಗೆ ದೀದಿ ಭೇಟಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ (Darjeeling) ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ, ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗುತ್ತಿದ್ದಂತೆ ಪಶ್ಚಿಮ ಬಂಗಾಳ ಸರ್ಕಾರ ಎಚ್ಚೆತ್ತುಕೊಂಡಿದೆ. ಸಾರ್ವಜನಿಕರ ಸಹಾಯಕ್ಕಾಗಿ ಸಿಎಂ ಮಮತಾ ಬ್ಯಾನರ್ಜಿ (Mamata Banerjee), 24/7 ಕಂಟ್ರೋಲ್‌ ರೂಮ್‌ ತೆರೆದಿದ್ದಾರೆ.

ಈಗಾಗಲೇ‌ ಪರಿಸ್ಥಿತಿಯನ್ನು ಕಂಟ್ರೋಲ್‌ ರೂಮ್‌ (Control Room) ಮೂಲಕ ಮೇಲ್ವಿಚಾರಣೆ ಮಾಡುತ್ತಿದ್ದು, ಸೋಮವಾರ (ಅ.6) ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.

ಶನಿವಾರ ರಾತ್ರಿ ಸುರಿದ ಹಠಾತ್‌ ಮಳೆಯಿಂದ ಭೂಕುಸಿತ ಉಂಟಾಗಿದ್ದು, ಬಂಗಾಳದ ಉತ್ತರ ಮತ್ತು ದಕ್ಷಿಣದ ಹಲವಾರು ಪ್ರದೇಶಗಳು ಪ್ರವಾಹಕ್ಕೆ ತುತ್ತಾಗಿವೆ. ಇದು ನಿಜಕ್ಕೂ ದುಃಖಕರವಾಗಿದೆ ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಬೇಸರ ಹೊರಹಾಕಿದ್ದಾರೆ.

ಉತ್ತರ ಬಂಗಾಳದಲ್ಲಿ 12 ಗಂಟೆಗಳಲ್ಲಿ 300 MMಗೂ ಅಧಿಕ ಮಳೆಯಾಗಿದೆ. ಇದರಿಂದ ಸಂಕೋಶ್ ನದಿ, ಭೂತಾನ್ ಮತ್ತು ಸಿಕ್ಕಿಂನಿಂದ ನದಿ ನೀರಿನ ಹರಿವಿನಲ್ಲೂ ಏರಿಕೆಯಾಗಿದೆ. ಹಠಾತ್ ಪ್ರವಾಹದಿಂದ ನಮ್ಮ ಕೆಲ ಸಹೋದರ-ಸಹೋದರಿಯರನ್ನ ಕಳೆದುಕೊಂಡಿದ್ದೇವೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪ ತಿಳಿಸುತ್ತೇನೆ. ಅಲ್ಲದೇ ಆ ಕುಟುಂಬಗಳಿಗೆ ಅಗತ್ಯ ಸಹಾಯ ನೀಡುವುದಾಗಿ ತಿಳಿಸಿದ್ದಾರೆ.

ಸಿಕ್ಕಿಂ ಸಂಪರ್ಕ ಕಡಿತ
ಡಾರ್ಜಲಿಂಗ್‌ನಲ್ಲಿ ಸಂಭವಿಸಿದ ಈ ವಿಪತ್ತು ಹಿಮಾಲಯ ರಾಜ್ಯವಾದ ಸಿಕ್ಕಿಂ ಜೊತೆಗಿನ ಸಂಪರ್ಕ ಕಡಿತಗೊಳಿಸಿದೆ. ಮಿರಿಕ್ ಮತ್ತು ಸುಖಿಯಾ ಪೋಖಾರಿಯಂತಹ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿದ್ದು, ಪೊಲೀಸರು ಮತ್ತು ಸ್ಥಳೀಯ ಆಡಳಿತವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಬಂಗಾಳ ಮತ್ತು ಸಿಕ್ಕಿಂ ಅನ್ನು ಸಂಪರ್ಕಿಸುವ ರಸ್ತೆ, ಡಾರ್ಜಿಲಿಂಗ್ ಮತ್ತು ಸಿಲಿಗುರಿಯನ್ನು ಸಂಪರ್ಕಿಸುವ ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಭೂಕುಸಿತಗಳು ರಸ್ತೆ ತಡೆಗಳಿಗೆ ಕಾರಣವಾಗಿವೆ. ದುರ್ಗಾ ಪೂಜೆಯ ನಂತರ ಕೋಲ್ಕತ್ತಾ ಮತ್ತು ಬಂಗಾಳದ ಇತರ ಭಾಗಗಳಿಂದ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಡಾರ್ಜಿಲಿಂಗ್‌ಗೆ ಪ್ರಯಾಣಿಸುತ್ತಾರೆ. ಈ ವಿಪತ್ತಿನಲ್ಲಿ ಅನೇಕ ಪ್ರವಾಸಿಗರು ಸಿಲುಕಿಕೊಳ್ಳುವ ಸಾಧ್ಯತೆಯಿದೆ.