ಕಪ್ಪುಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾದ ಕೊರೊನಾ ವಾರಿಯರ್ಸ್

ದಾವಣಗೆರೆ: ಹೆಮ್ಮಾರಿ ಕೊರೊನಾ ವೈರಸ್ ತಡೆಗಟ್ಟಲು ವೈದ್ಯರು ಹಗಲು ರಾತ್ರಿ ಎನ್ನದೆ ಕೆಲಸ ಮಾಡುತ್ತಿದ್ದು, ಅವರ ಜೊತೆ ವೈದ್ಯಕೀಯ ವಿದ್ಯಾರ್ಥಿಗಳು ಕೂಡ ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಅಂತಹ ಕೊರೊನಾ ವಾರಿಯರ್ಸ್ ಗಳ ಸರ್ಕಾರ ನಿರ್ಲಕ್ಷ್ಯವಹಿಸಿದೆ.

15 ತಿಂಗಳ ಶಿಷ್ಯವೇತನಕ್ಕೆ ಒತ್ತಾಯಿಸಿ ದಾವಣಗೆರೆಯ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಕಪ್ಪುಪಟ್ಟಿ ಧರಿಸಿ ಕೋವಿಡ್ ವಾರ್ಡ್‍ಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದೆರಡು ದಿನದ ಹಿಂದಷ್ಟೇ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾಸ್ಪತ್ರೆಯ ಮುಂಭಾಗ ಕ್ಯಾಂಡಲ್ ಲೈಟ್ ಹಿಡಿದು ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳು ಇಂದು ಕಪ್ಪು ಪಟ್ಟಿ ಧರಿಸಿ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದಾರೆ.

ಮೆರಿಟ್ ಸೀಟ್ ಪಡೆದ ವಿದ್ಯಾರ್ಥಿಗಳ ಶಿಷ್ಯವೇತನವು 2019ರ ಫೆಬ್ರವರಿಯಿಂದ ಪಾವತಿಯಾಗಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಕಾಲೇಜು, ಹಾಸ್ಟಲ್ ಶುಲ್ಕ ಪಾವತಿಸಲು ಪರದಾಡುವ ಸ್ಥಿತಿಯಲ್ಲಿದ್ದಾರೆ. ಸರ್ಕಾರ ಈ ಕೂಡಲೇ ಶಿಷ್ಯ ವೇತನ ನೀಡಿದರೆ ನಮ್ಮ ಕಷ್ಟ ನಿವಾರಣೆಯಾಗಲಿದೆ ಎಂದು ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.

ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ 100ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳಿದ್ದಾರೆ. ನಮ್ಮ ಹೋರಾಟ ನಮ್ಮ ಹಕ್ಕಿಗಾಗಿ, ರೋಗಿಗಳ ವಿರುದ್ಧವಲ್ಲ ಎಂಬ ಘೋಷಣೆಯೊಂದಿಗೆ ಕಪ್ಪು ಪಟ್ಟಿ ಧರಿಸಿ ಸೇವೆಗೆ ಹಾಜರಾಗಿದ್ದಾರೆ.

ದಾವಣಗೆರೆಯ ಜೆಜೆಎಂ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಾಗಿದ್ದೇವೆ. ನಾವು ಮೆರಿಟ್‍ನಲ್ಲಿ ಸೀಟ್ ಪಡೆದು ವ್ಯಾಸಂಗ ಮಾಡುತ್ತಿದ್ದೇವೆ. ನಮ್ಮ ಮೆರಿಟ್ ಆಧರಿಸಿ ನಮಗೆ ಶಿಷ್ಯವೇತನ ನೀಡಲಾಗುತ್ತದೆ. ಆದರೆ ಕಳೆದ ಫೆಬ್ರವರಿ ತಿಂಗಳಿನಿಂದ ಶಿಷ್ಯವೇತನವಿಲ್ಲದೇ ನಮ್ಮ ಖರ್ಚು, ವೆಚ್ಚ ಭರಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಬೇಕೆಂದು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

Comments

Leave a Reply

Your email address will not be published. Required fields are marked *