ಮೇಯರ್ ಆಯ್ಕೆವರೆಗೂ ಬೆಳಗಾವಿ ಪಾಲಿಕೆಯ ಮೇಲೆ ಡಿಸಿ ಆಡಳಿತ

ಬೆಳಗಾವಿ: ರಾಜ್ಯದ ಐದು ಮಹಾನಗರ ಪಾಲಿಕೆಗೆ ಚುನಾವಣೆ ನಡೆದು ಮೇಯರ್ ಹಾಗೂ ಉಪಮೇಯರ್ ಅವರನ್ನು ಆಯ್ಕೆ ಮಾಡುವವರೆಗೆ ಆಯಾ ಜಿಲ್ಲಾಧಿಕಾರಿಗಳನ್ನು ಪಾಲಿಕೆಗೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಬಳ್ಳಾರಿ, ಬೆಳಗಾವಿ, ವಿಜಯಪುರ, ದಾವಣಗೆರೆ ಹಾಗೂ ಮಂಗಳೂರು ಮಹಾನಗರ ಪಾಲಿಕೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ಜ. 6ರಂದು ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಆಯಾ ವ್ಯಾಪ್ತಿಯ ಪ್ರಾದೇಶಿಕ ಆಯುಕ್ತರನ್ನು ಆಡಳಿತಾಧಿಕಾರಿಯನ್ನು ನೇಮಕ ಮಾಡುತ್ತಿದ್ದ ಸರ್ಕಾರ ತನ್ನ ಆದೇಶವನ್ನು ಮಾರ್ಪಡಿಸಿದ್ದು, ಇದೀಗ ಜಿಲ್ಲಾಧಿಕಾರಿಗಳನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿರುವುದರಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಬೆಳಗಾವಿ ಪ್ರಾದೇಶಿಕ ವಿಭಾಗದ ಆಯುಕ್ತ ಅಮ್ಲಾನ ಆದಿತ್ಯ ಬಿಸ್ವಾಸ್ ಅವರು ಬೆಳಗಾವಿ ನಗರ ಪಾಲಿಕೆಯ ಆಡಳಿತಾಧಿಕಾರಿಯಾಗಿ ಅಧಿಕಾರಿ ವಹಿಸಿಕೊಂಡ ಅವಧಿಯಿಂದಲೂ ಉತ್ತಮ ಕಾರ್ಯಗಳನ್ನು ಮಾಡುವ ಮೂಲಕ ಪಾಲಿಕೆಯನ್ನು ಸಾರ್ವಜನಿಕರಿಗೆ ಹತ್ತಿರವಾಗುವಂತೆ ಕ್ರಮಕೈಗೊಂಡಿದ್ದಾರೆ. ಅಲ್ಲದೇ ನಗರ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಅಕ್ರಮ ಬಡಾವಣೆಗಳನ್ನು ನಿರ್ಮಿಸಿ ಸಾರ್ವಜನಿಕರಿಗೆ ವಂಚನೆ ಮಾಡುತ್ತಿರುವ ಭೂಮಾಫಿಯಾ ದಂಧೆಕೊರರ ವಿರುದ್ಧ ಸಮರ ಸಾರುವ ಜೊತೆಗೆ ಬಡಾವಣೆಗಳನ್ನು ತೆರವುಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಜಿಡ್ಡು ಗಟ್ಟಿದ ಪಾಲಿಕೆ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಿ ನಗರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವಂತೆ ಮಾಡಿದರು.

ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ನೂರಾರು ಕೋಟಿ ರುಪಾಯಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ಮುಂದಿನ ಹಲವು ವರ್ಷಗಳ ಅಭಿವೃದ್ಧಿ ಯೋಜನೆಗೆ ಆದ್ಯತೆ ನೀಡುವ ಹಿನ್ನೆಲೆಯಲ್ಲಿ ಗುಣಮಟ್ಟದ ಕಾಮಗಾರಿ ಮಾಡುವಂತೆ ಅಧಿಕಾರಿಗಳಿಗೆ ಡಿಸಿ ಸೂಚಿಸಿದ್ದಾರೆ.

Comments

Leave a Reply

Your email address will not be published. Required fields are marked *